ಸಿಂದಗಿ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಮಾತ್ರ ರಾಜ್ಯದ ಹಿತ ಕಾಯಲು ಸಾಧ್ಯ ಎಂದು ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಹೇಳಿದರು.
ಯಂಕಂಚಿ ಗ್ರಾಮದಲ್ಲಿ ಮನೆ ಮನೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಸರಕಾರದ ಅವಧಿಯಲ್ಲಿ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ನೀರಾವರಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಸರಕಾರಗಳ ಅವಧಿಯಲ್ಲಿ ಅಭಿವದ್ಧಿಗಿಂತ ಭ್ರಷ್ಟಾಚಾರ ಹೆಚ್ಚಾಗಿ ರಾಜ್ಯದ ಅಭಿವದ್ದಿ ಕುಸಿಯುವಂತಾಯಿತು ಎಂದರು.
ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳಿದಾಗ ಯಾವುದೇ ಸಂಸದರು ಈ ಬಗ್ಗೆ ಚಕಾರ ಎತ್ತಲಿಲ್ಲ. ಅದ್ದರಿಂದ, ರಾಜ್ಯದ ಹಿತಕ್ಕಾಗಿ ಜೆಡಿಎಸ್ ಪಕ್ಷವನ್ನು ಬಲಪಡಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಗೆಲ್ಲಿಸಿ. ನಾನು ನಿಮ್ಮ ಧ್ವನಿಯಾಗಿ ವಿಧಾನಸೌಧದಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಜೆಡಿಎಸ್ ಯುವ ಮುಖಂಡ ಸಿದ್ದನಗೌಡ ಬಿರಾದಾರ ಮಾತನಾಡಿ, ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಕೊಡುಗೆ ಅಪಾರ. ಕುಮಾರಸ್ವಾಮಿ ತಮ್ಮ 14 ತಿಂಗಳ ಅಧಿಕಾರ ಅವಧಿಯಲ್ಲಿ ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಅವರು ಮಾಡಿದ ಕಾರ್ಯ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ. ಪಕ್ಷದ ಅಭ್ಯರ್ಥಿ ನಾಜಿಯಾ ಅಂಗಡಿ ಅವರನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸುತ್ತೇವೆ ಎಂದು ಹೇಳಿದರು.
ಜೆಡಿಎಸ್ ಪಕ್ಷದ ಮುಖಂಡರಾದ ಪ್ರಕಾಶ ಹಿರೆಕುರಬರ, ಅಖೀಲ ಮಣಿಯಾರ, ಇಮಾಮಸಾಬ ನದಾಫ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.