ಹಾವೇರಿ: ಸಮಸ್ಯೆಗಳು, ಕುಂದುಕೊರತೆಗಳ ನಿವಾರಣೆಗಾಗಿ ಸರ್ಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಬಗ್ಗೆ ಚಿಂತನೆ ಇರಲಿ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ಬಗ್ಗೆ ಎಲ್ಲ ಇಲಾಖಾ ಅಧಿಕಾರಿಗಳು ಗಮನ ಹರಿಸಿ ಕೆಲಸ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೂಚನೆ ನೀಡಿದರು.
ರವಿವಾರ ಬ್ಯಾಡಗಿ ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯತಿ ಕಚೇರಿ ಹಾಗೂ ಪುರಸಭೆ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯ ಸ್ವಚ್ಛತೆ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.
ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸ್ವೀಕಾರಕ್ಕೆ ಜಿಲ್ಲೆಯ ಎಲ್ಲ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತಿ ಕಚೇರಿಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸ್ವೀಕಾರ ಪೆಟ್ಟಿಗೆ ಅಳವಡಿಸಿ, ತಿಂಗಳಿಗೊಮ್ಮೆ ಸಾರ್ವಜನಿಕರ ಎದುರು ತೆರೆದು ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಿದರು.
ಅಲ್ಲದೇ, ತಹಶೀಲ್ದಾರ್ ಕಚೇರಿಯ ವಿವಿಧ ವಿಷಯಗಳ ನಿರ್ವಾಹಕರ ಕಡತ ವಿಲೇವಾರಿ ಕುರಿತಂತೆ ಪರಿಶೀಲನೆ ನಡೆಸಿದರು. ಬೆಳೆ ವಿಮೆ ನೋಂದಣಿಗೆ ನೆರವಾಗಲು ಅನುಕೂಲವಾಗುವಂತೆ ಹೆಲ್ಪ ಡೆಸ್ಕ್ಗಳ ಸಂಪರ್ಕ ಸಂಖ್ಯೆಯನ್ನು ಕೃಷಿ ಇಲಾಖೆ ಸೇರಿದಂತೆ ತಹಶೀಲ್ದಾರ್ ಕಚೇರಿ ಹೊರ ಆವರಣದಲ್ಲಿ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಿದರು.
ಎಸಿಬಿ ನಂಬರ್ ಚೆಕ್: ಬ್ಯಾಡಗಿ ಪುರಸಭೆ ಕಚೇರಿ ಮುಂಭಾಗದಲ್ಲಿ ಅಳವಡಿಸಲಾದ ಭ್ರಷ್ಟಾಚಾರ ನಿಗ್ರಹ ದಳದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರವಾಣಿಗಳು ಸಕ್ರಿಯವಾಗಿರುವ ಕುರಿತಂತೆ ಪರಿಶೀಲನೆ ನಡೆಸಿದರು.
ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಹಾಗೂ ಪುರಸಭೆ ಮುಖ್ಯಾಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಫಲಾನುಭವಿಗಳಿಗೆ ಪರಿಹಾರ ಹಣ ನೀಡಲು ಸೂಚನೆ: ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಹಣ ಮಿಸ್ ಮ್ಯಾಚ್ ಕಾರಣ ನಿಜವಾದ ಫಲಾನುಭವಿಗೆ ತಲುಪದೇ ಬೇರೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹೋಗಿರುವ ಕುರಿತಂತೆ ಸಾರ್ವಜನಿಕರೊಬ್ಬರ ದೂರುಗಳ ಹಿನ್ನೆಲೆಯಲ್ಲಿ, ಒಂದು ವಾರದೊಳಗಾಗಿ ಪರಿಶೀಲನೆ ನಡೆಸಿ ನೈಜ ಫಲಾನುಭವಿಗಳಿಗೆ ಪರಿಹಾರ ಹಣ ಪಾವತಿಗೆ ಕ್ರಮ ವಹಿಸುವಂತೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದರು.