ಬೆಂಗಳೂರು: ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತಂತೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಕ್ಕಳ ತಜ್ಞ ಹಾಗೂ ಮಾಜಿ ಶಾಸಕ ಡಾ.ಸಾರ್ವಭೌಮ ಎಸ್. ಬಗಲಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ವಿಧಾನಗಳು ಮತ್ತು ಭ್ರೂಣ ಹತ್ಯೆ ನಿಷೇಧ ಕಾಯ್ದೆಯನ್ನು ಯಾವ ರೀತಿ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂಬ ವಿಚಾರ ಸಂಬಂಧ ಎಲ್ಲಾ ರಾಜ್ಯಗಳಿಗೆ ಅನ್ವಯವಾಗುವಂತೆ 2016ರ ನ.8ರಂದು ಸುಪ್ರೀಂಕೋರ್ಟ್ ಆದೇಶ ಮಾಡಿತ್ತು. ಆ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡುತ್ತಿಲ್ಲ. ಇದರಿಂದ ರಾಜ್ಯದಲ್ಲಿ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಕುರಿತು ಈ ಹಿಂದೆ ಸರ್ಕಾರ ಸಲ್ಲಿಸಿರುವ ಆಕ್ಷೇಪಣೆ ಪತ್ರವು ಕಾಯ್ದೆಯ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್ ಮಾಡಿರುವ ಆದೇಶದಂತೆ ಇಲ್ಲ. ಹೀಗಾಗಿ, ಸುಪ್ರೀಂಕೋರ್ಟ್ ನೀಡಿರುವ ಪ್ರತಿಯೊಂದು ನಿರ್ದೇಶನದ ಪಾಲನೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ವಿವರಿಸಿ ಸೆ.11ರೊಳಗೆ ಸಮಗ್ರ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.