ಬೆಳಗಾವಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಗೃಹ ಆರೋಗ್ಯ ಮತ್ತು ಆಶಾಕಿರಣ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಬುಧವಾರ ಬೆಳಗಾವಿ ವಿಭಾಗಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಆರೋಗ್ಯ ಯೋಜನೆಯಡಿ ಎಂಟು ಜಿಲ್ಲೆಗಳು ಮತ್ತು ಆಶಾಕಿರಣ ಯೋಜನೆಯಡಿ ಎಂಟು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಗೃಹ ಆರೋಗ್ಯ ಯೋಜನೆಯಡಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಮನೆಯ ಪ್ರತಿಯೊಬ್ಬ ಸದಸ್ಯರ ರಕ್ತದೊತ್ತಡ ಮತ್ತು ಮಧುಮೇಹದ ಪರೀಕ್ಷೆ ಮಾಡಲಿದ್ದಾರೆ. ಎರಡು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು ಬೆಳಗಾವಿ ವಿಭಾಗದಲ್ಲಿ ಬೆಳಗಾವಿ ಮತ್ತು ಗದಗ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ಅದೇ ರೀತಿ ಆಶಾಕಿರಣ ಯೋಜನೆಯಡಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮನೆ ಸದಸ್ಯರ ಕಣ್ಣು ತಪಾಸಣೆ ನಡೆಸಲಾಗುವುದು. ಈ ಎಲ್ಲ ತಪಾಸಣೆ ಉಚಿತವಾಗಿರುತ್ತದೆ. ಮೊದಲ ತಿಂಗಳು ನಾಲ್ಕು ಜಿಲ್ಲೆಗಳಲ್ಲಿ ಎರಡನೇ ತಿಂಗಳು ಉಳಿದ ನಾಲ್ಕು ಜಿಲ್ಲೆಗಳಲ್ಲಿ ಈ ಕಾರ್ಯ ನಡೆಯಲಿದೆ. ಈ ಯೋಜನೆಯಡಿ ಬೆಳಗಾವಿ ವಿಭಾಗದಲ್ಲಿ ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಈ ಎರಡೂ ಯೋಜನೆಗಳನ್ನು ವಿಸ್ತರಿಸಲಾಗುವುದು ಎಂದರು.
ತಾಯಿ ಮತ್ತು ಮಕ್ಕಳ ಆರೋಗ್ಯ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗುವಿನ ಆರೋಗ್ಯದ ಕಡೆಗೆ ವಿಶೇಷ ಗಮನ ನೀಡಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳ ಹಾಗೂ ತಾಯಿಯ ಮರಣದ ಅನುಪಾತವನ್ನು ಗಣನೀಯವಾಗಿ ಕಡಿಮೆ ಮಾಡಬೇಕಿದ್ದು ಈ ನಿಟ್ಟಿನಲ್ಲಿ ವಿವಿಧ ಸುಧಾರಣಾ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ತಜ್ಞ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳ ಕೊರತೆ ಬಹಳಷ್ಟಿದೆ. ಈ ಕೊರತೆ ನೀಗಿಸಲು ಕ್ರಮ ವಹಿಸಲಾಗುತ್ತಿದೆ. ಅನೇಕ ಕಡೆ ಸಿಬ್ಬಂದಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳೂ ಬರುತ್ತಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಇಲಾಖೆಯಲ್ಲಿ ಇ-ತಂತ್ರಾಂಶ ಅಳವಡಿಸಲಾಗುತ್ತಿದೆ. ಇದರಿಂದ ವೈದ್ಯರು ಸೇರಿದಂತೆ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಷಮತೆ ಪರಿಶೀಲಿಸಲು ಅನುಕೂಲವಾಗುತ್ತದೆ. ಯಾವ ಸಿಬ್ಬಂದಿ ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂಬುದು ತಿಳಿಯಲಿದೆ ಎಂದರು.
ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್‌ಐ ಯಂತ್ರ ಕಡ್ಡಾಯ
ಆರೋಗ್ಯದ ವಿಷಯದಲ್ಲಿ ರಾಜ್ಯದ ಒಟ್ಟಾರೆ ಫಲಿತಾಂಶ ತೃಪ್ತಿಕರವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುವ ಚಿಂತನೆ ಇದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್‌ಐ ಯಂತ್ರ ಕಡ್ಡಾಯವಾಗಿ ಇರಬೇಕು ಎಂದು ಸೂಚಿಸಲಾಗಿದೆ. ಅದರಂತೆ ಈಗ ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಆಸ್ಪತ್ರೆಗಳಿಗೆ ಎಂಆರ್‌ಐ ಯಂತ್ರ ಅಳವಡಿಸಲಾಗುತ್ತಿದೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.