Advertisement

ಕಲ್ಯಾಣ ಕರ್ನಾಟಕದಲ್ಲಿ ನಂಜುಂಡಪ್ಪ ವರದಿ ಜಾರಿ: ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

10:06 PM Jun 13, 2024 | Team Udayavani |

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಈ ವಿಚಾರವಾಗಿ ಬೀದರ್‌ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ ವದ್ದೆ 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸರ್ಕಾರದ ಪರ ವಕೀಲರು, ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಈಗಾಗಲೇ ಡಾ. ಡಿ.ಎಂ. ನಂಜುಡಪ್ಪ ವರದಿ ಜಾರಿಯಲ್ಲಿದೆ. 2007-08ರಿಂದ ಈ ವರದಿ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಪ್ರತಿ ವರ್ಷ ಬಜೆಟ್‌ನಲ್ಲಿ ಹಣ ಮೀಸಲಿಡಲಾಗುತ್ತದೆ. ಅಲ್ಲದೇ ಇಂತಹದ್ದೆ ಅರ್ಜಿಯನ್ನು 20214ರಲ್ಲಿ ಸಲ್ಲಿಸಲಾಗಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಸರ್ಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವರದಿಯ ಶಿಫಾರಸುಗಳು ಈಗಾಗಲೇ ಜಾರಿಯಲ್ಲಿವೆ ಮತ್ತು 2014ರಲ್ಲಿ ಇಂಥದ್ದೆ ಅರ್ಜಿ ಸಲ್ಲಿಕೆಯಾಗಿತ್ತು. ಇದು ಗೊತ್ತಿದ್ದೂ ಅನಗತ್ಯವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

Advertisement

Udayavani is now on Telegram. Click here to join our channel and stay updated with the latest news.

Next