Advertisement
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಲೋಕಸಭೆ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಪ್ರಾಯ ಮತ್ತು ಸಲಹೆ ಪ್ರಮುಖವಾಗಿ ಪರಿಗಣನೆಯಾಗಬೇಕು. ಇಬ್ಬರಿಗೂ ಒಪ್ಪುವ ಸರ್ವಸಮ್ಮತ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷರಾಗಿರಬೇಕು ಎಂಬುದು ಹೈಕಮಾಂಡ್ ನಿಲುವು ಎಂದು ತಿಳಿದು ಬಂದಿದೆ. ಕೆಪಿಸಿಸಿಗೆ ಹೊಸ ಅಧ್ಯಕ್ಷರು ನೇಮಕವಾದರೂ ಹಾಲಿ ಅಧ್ಯಕ್ಷರೇ ಮುಂದುವರಿದರೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರ್ನಾಟಕದಲ್ಲಿ ಪಕ್ಷದ ವಿಚಾರದಲ್ಲಿ ಹೆಚ್ಚಿನ ಹೊಣೆಗಾರಿಕೆ ಎಐಸಿಸಿ ನೀಡಲಿದೆ ಎಂದು ಹೇಳಲಾಗಿದೆ.
ಹೈಕಮಾಂಡ್ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಸಂಜೆಯೇ ದಿಲ್ಲಿಗೆ ತೆರಳಿದ್ದು, ಸೋಮವಾರ ಬೆಳಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಆಕಾಂಕ್ಷಿಗಳಾದ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕದ ಬೆಳವಣಿಗೆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಾದ ಎಸ್.ಆರ್. ಪಾಟೀಲ್, ಸಚಿವರಾದ ಕೆ.ಜೆ. ಜಾರ್ಜ್, ರೋಷನ್ ಬೇಗ್ ಸಹಿತ ಹಲವರು ಸಚಿವರು ದಿಲ್ಲಿ ತಲುಪಿದ್ದಾರೆ.