ಬೆಂಗಳೂರು: ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ಕಠಿಣ ನಿಲುವು ತಳೆದಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಅರಣ್ಯ ಹಕ್ಕು ಕಾಯ್ದೆ ಜಾರಿ ವಿಚಾರದಲ್ಲಿ ಸರ್ಕಾರದ ಆದೇಶದ ಪ್ರಕಾರವೇ ನಡೆದುಕೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಇಲಾಖಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕೆಲಸಗಳ ಕುರಿತ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವೊಂದು ಸೂಚನೆಗಳನ್ನು ನೀಡಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಅನಗತ್ಯ ತಕರಾರು ತೆಗೆದು ಬಲವಂತವಾಗಿ ಒತ್ತುವರಿ ತೆರವು ಮಾಡುತ್ತಿದ್ದಾರೆ. ಹೀಗಾಗಿ ತಮ್ಮ ಸ್ವಾರ್ಥಕ್ಕಾಗಿ ಅರಣ್ಯ ಒತ್ತುವರಿ ಮಾಡಿಕೊಳ್ಳುತ್ತಿರುವವರನ್ನು ತೆರವುಗೊಳಿಸಲು ವಿಳಂಬವಾಗುತ್ತಿದೆ. ಆದ್ದರಿಂದ ಅರಣ್ಯ ಸಚಿವರು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸ್ಮಶಾನ ಭೂಮಿ ಒದಗಿಸಲು ಕ್ರಮ ಕೈಗೊಳ್ಳಿ: ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಒದಗಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡಿದರೂ ಕೆಲವು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಪ್ರಶ್ನಿಸಿದ ಸಿಎಂ, ಸ್ಮಶಾನಕ್ಕಾಗಿ ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಖರೀದಿಸಿ. ಸರ್ಕಾರ ಈ ಹಿಂದೆ ಸೂಚಿಸಿದಂತೆ ಸ್ಮಶಾನ ಅಭಿವೃದ್ಧಿ ಕಾರ್ಯಕ್ರಮವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅಡುಗೆ ಅನಿಲ ಸಂಪರ್ಕ ಹೊಂದಿದವರಿಗೆ ಸೀಮೆಎಣ್ಣೆ ವಿತರಿಸದಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರಶ್ನಿಸಿದಾಗ, 1995ರ ನೀತಿ ಪ್ರಕಾರ ಇದಕ್ಕೆ ಅವಕಾಶ ವಿಲ್ಲ ಎಂದು ಅಧಿಕಾರಿಗಳು ಹೇಳಿದರು. ಇದಕ್ಕೆ ಒಪ್ಪದ ಸಿಎಂ, ಅಡುಗೆ ಅನಿಲ ಸಂಪರ್ಕವಿದೆ ಎಂದ ಮಾತ್ರಕ್ಕೆ ಅವಶ್ಯಕತೆ ಇದ್ದವರಿಗೆ ಸೀಮೆಎಣ್ಣೆ ನಿರಾಕರಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೂ ಸೀಮೆಎಣ್ಣೆ ವಿತರಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಪಿಎಲ್ ಕಾರ್ಡ್‌ದಾರರಿಗೆ ಕೂಪನ್ ವ್ಯವಸ್ಥೆ ಅಥವಾ ಹಣ ನೀಡುವ ಪದ್ಧತಿ ಬೇಡ. ಪಡಿತರವನ್ನೇ ವಿತರಿಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಆಧಾರ್ ಸಂಖ್ಯೆ ಜೋಡಣೆ ಮಾಡಿಲ್ಲ ಎಂಬ ಕಾರಣಕ್ಕೂ ಪಡಿತರ ಸ್ಥಗಿತಗೊಳಿ ಸುವುದು ಬೇಡ. ಬರ ಪರಿಸ್ಥಿತಿ ಇರುವುದರಿಂದ ಇನ್ನೂ ಎರಡು ತಿಂಗಳು ಅಂಥವರಿಗೆ ಪಡಿತರ ವಿತರಣೆ ಮಾಡಬೇಕು ಎಂದರು.
ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ
ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಶೂ ಮತ್ತು ಸೈಕಲ್ ವಿತರಣೆಗೆ ಸಿದ್ಧವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಪಠ್ಯಪುಸ್ತಕ ಲಭ್ಯವಿದ್ದರೂ ಸಮವಸ್ತ್ರ ವಿತರಣೆ ವಿಳಂಬವಾಗುತ್ತಿದೆ. ಅದರಲ್ಲೂ ಶೂ ಮತ್ತು ಸೈಕಲ್ ವಿತರಣೆ ತೀರಾ ವಿಳಂಬವಾಗುತ್ತಿದೆ. ಹೀಗಾಗಿ ಸರ್ಕಾರ ಶಾಲಾ ಮಕ್ಕಳಿಗಾಗಿ ಯೋಜನೆ ಜಾರಿಗೊಳಿಸಿ ಹಣ ವೆಚ್ಚ ಮಾಡಿದರೂ ಅದು ಸಕಾಲಕ್ಕೆ ಮಕ್ಕಳಿಗೆ ಸಿಗದೆ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಮುಂದೆ ಹೀಗಾಗಲು ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.