ಶಿವಮೊಗ್ಗ: ಕರ್ನಾಟಕದಲ್ಲಿಯೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಮಾದರಿ ಫಲಿತಾಂಶವೇ ಬರಲಿದೆ. ಪಂಚರಾಜ್ಯಗಳ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ಪ್ರಧಾನಿ ಮೋದಿಯವರಿಗೆ ಸಂದ ಜಯ ಎಂದರು.
ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಫಲಿತಾಂಶದಿಂದ ದೇಶದ ಜನರ ನಾಡಿ ಮಿಡಿತ ಗೊತ್ತಾಗಿದೆ. ಪಂಜಾಬ್‌ನಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಹಿನ್ನಡೆಯಾಗಲು ಅಲ್ಲಿನ ಪ್ರಾದೇಶಿಕ ಸಮಸ್ಯೆ ಕಾರಣ. ಉಳಿದಂತೆ ಗೋವಾ ಮತ್ತು ಮಣಿಪುರದಲ್ಲಿ ಒಂದೆರಡು ಸ್ಥಾನಗಳ ಕೊರತೆಯಿದೆ. ಇಲ್ಲಿ ಏನು ಬೇಕಾದರೂ ಆಗಬಹುದು ಎಂದರು.
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಎದ್ದು ಕಾಣುತ್ತಿದ್ದು ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮ ಮಂದಿರ, ಗೋ ಹತ್ಯೆ ನಿಷೇಧ, ಏಕರೂಪ ನಾಗರಿಕ ಸಂಹಿತೆ ಕುರಿತಾಗಿ ಈಗೇನೂ ಹೇಳಲಾಗದು. ರಾಷ್ಟ್ರೀಯ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ಈಶ್ವರಪ್ಪ ತಿಳಿಸಿದರು.