ಮೈಸೂರು: ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಸೆ.29ರ ಬೆಳಗ್ಗೆ 9.39 ರಿಂದ 10.25ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ದೇವಿಗೆ ಅಗ್ರಪೂಜೆಯೊಂದಿಗೆ 2019ರ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.
ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಪದ್ಮಶ್ರೀ ಡಾ.ಎಸ್.ಎಲ್.ಭೈರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಉಪ ಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಉಪಸ್ಥಿತರಿರಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸಪೂಜಾರಿ, ಮೈಸೂರು ಮಹಾ ನಗರಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಆವರಣದಲ್ಲಿ ಸಂಜೆ 6ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದಾರೆ.
ಅ.8ರ ಮಧ್ಯಾಹ್ನ 2.15ರಿಂದ 2.58ಕ್ಕೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿ ಆರಂಭವಾಗಲಿದೆ. ಮಧ್ಯಾಹ್ನ 4.31 ರಿಂದ 4.57ರವರೆಗೆ 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ದಸರಾ ಗಜಪಡೆ ಕ್ಯಾಪ್ಟನ್ ಅರ್ಜುನ ಹೊತ್ತು ತರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ರಾಜವಂಶಸ್ಥರಾದ ಯದು ವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.
ಪಂಜಿನ ಕವಾಯತು: ಸಂಜೆ 7ರಿಂದ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಕವಾಯತು ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಕೇಂದ್ರ-ರಾಜ್ಯದ ಹಲವು ಸಚಿವರು ಭಾಗವಹಿಸಲಿದ್ದು, ಶಾಸಕ ತನ್ವೀರ್‌ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.