Advertisement

ಅರ್ಹ ಯುವಕರನ್ನು ಮತದಾರರ ಪಟ್ಟಿಗೆ ಸೇರಿಸಿ

11:45 AM Dec 04, 2022 | Team Udayavani |

ಗದಗ: ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಯೇ ಪ್ರಭು. ಪ್ರತಿ ಪ್ರಜೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯದ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲು ಪ್ರೇರೇಪಿಸಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರೂ ಆದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಸುಶೀಲಾ ಬಿ. ಹೇಳಿದರು.

Advertisement

ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾಮಟ್ಟದ ಸ್ವೀಪ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರಿಸುವ ನೋಂದಣಿಗಾಗಿ ಅಭಿಯಾನ ಹಾಗೂ ಮಿಂಚಿನ ನೋಂದಣಿ ಕಾರ್ಯ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಯುವಕ, ಯುವತಿಯರು ತಪ್ಪದೇ ನೋಂದಣಿ ಮಾಡಿಕೊಳ್ಳಬೇಕೆಂದು ಹೇಳಿದರು.

ಸರ್ಕಾರಿ ಕಚೇರಿ, ಅನುದಾನಿತ ಸಂಘ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಹಾಗೂ ಇಲಾಖೆ, ಸಂಘ, ಸಂಸ್ಥೆಗಳಲ್ಲಿ ವ್ಯವಹರಿಸುವ ಪ್ರತಿ ಅರ್ಹ ಮತದಾರರು ಸಹ ತಮ್ಮ ಮತದಾರರ ಚೀಟಿಗೆ ಆಧಾರ್‌ ಜೋಡಣೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಈ ಕಾರ್ಯವನ್ನು ತ್ವರಿತವಾಗಿ ಇಲಾಖಾ ಹಂತದ ಅಧಿಕಾರಿಗಳು ನಿರ್ವಹಿಸಲು ಸೂಚಿಸಿದರು.

ಇಲಾಖಾವಾರು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಕ್ರಿಯಾ ಯೋಜನೆಗಳನ್ನು ಹಮ್ಮಿಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಜರುಗಿಸಬೇಕು. ಒಟ್ಟಾರೆ ಚುನಾವಣೆ ಪ್ರಕ್ರಿಯೆಯ ಪ್ರತಿಯೊಂದು ಹಂತಗಳನ್ನು ಮತದಾರರಿಗೆ ತಿಳಿಸಿಕೊಡುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿ ಮತದಾರರೂ ತಮ್ಮ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕೆಂದರು.

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕರಡು ಮತದಾರರ ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ್‌ ಕಚೇರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಹಾಗೂ ಸಂಬಂಧಪಟ್ಟ ತಹಶೀಲ್ದಾರ್‌ ಕಾರ್ಯಾಲಯಗಳಲ್ಲಿ ಸ್ವೀಕರಿಸಲಾಗುತ್ತಿದೆ ಎಂದರು.

Advertisement

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ ಮಾತನಾಡಿ, 2023ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ.6 ರಲ್ಲಿ ಸಲ್ಲಿಸಬಹುದು. ಈ ಕುರಿತು ಇಲಾಖಾ ಅಧಿಕಾರಿಗಳು ಅರ್ಹರೆಲ್ಲರನ್ನು ನೋಂದಣಿ ಮಾಡಿಸಬೇಕೆಂದರು.

ಜಿಲ್ಲಾಡಳಿತದಿಂದ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಅರ್ಹ ನಾಗರಿಕರು ಹಾಗೂ 18 ವರ್ಷ ವಯೋಮಾನದ ಯುವ ಮತದಾರರು ತಮ್ಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ 6 ರಲ್ಲಿ ಸಂಬಂಧಿಸಿದ ಬಿಎಲ್‌ಒಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಅರ್ಹ ಯುವಕರು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಬಹುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಐ.ಆರ್‌. ಅಕ್ಕಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮುಖ್ಯ ಚುನಾವಣಾ ತರಬೇತುದಾರ ಬಸವರಾಜ ಗಿರಿತಿಮ್ಮಣ್ಣವರ, ಸರ್ಕಾರಿ ಪಾಲಿಟೆಕ್ನಿಕ್‌ ಪ್ರಾಚಾರ್ಯರು, ಚುನಾವಣಾ ಶಾಖೆ ತಹಶೀಲ್ದಾರ್‌, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠಲ ಜಾಬಗೌಡ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಸೇರಿದಂತೆ ಸ್ವೀಪ್‌ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next