ಬೆಂಗಳೂರು: ಆದಾಯ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಸಕ್ಕರೆ ಕಾರ್ಖಾನೆಗಳ ಮಾಲಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ.
ಆದಾಯ ಹಂಚಿಕೆ ಸಾಧಕ-ಬಾಧಕಗಳ ಕುರಿತು ಗುರುವಾರ ವಿಕಾಸಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವ್ಯವಸ್ಥಾಪಕ ನಿರ್ದೇಶಕರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆದಾಯ ಹಂಚಿಕೆಯಲ್ಲಿ ಸಾಧಕ- ಬಾಧಕ ಕುರಿತು ಸಕ್ಕರೆ ಕಾರ್ಖಾನೆ ಮಾಲಕರ ಜತೆ ಚರ್ಚೆ ನಡೆಸಿದ್ದು, ಮಾಲಕರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಅಲ್ಲದೆ, ಸರಕಾರ ಮತ್ತು ಮುಖ್ಯಮಂತ್ರಿಗಳ ಅಭಿಪ್ರಾಯಕ್ಕೆ ಸಹಮತ ಸೂಚಿಸುವುದಾಗಿ ಹೇಳಿದ್ದಾರೆ. ಮುಂದಿನ 5 ದಿನಗಳಲ್ಲಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭವಾಗಿದ್ದು, ರೈತರಿಗೆ ಎಫ್ಆರ್‌ಪಿಗಿಂತ ಹೆಚ್ಚು ಮೊತ್ತವನ್ನು ಪಾವತಿಸಲಾಗುತ್ತಿದೆ. ಕೆಲವು ಕಡೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ, ಸಕ್ಕರೆ ಕಾರ್ಖಾನೆಗೆ ಮುತ್ತಿಗೆಯಂಥ ಘಟನೆಗಳು ನಡೆದಿವೆ. ಸತ್ಯಾಗ್ರಹ ಕೈಬಿಟ್ಟು, ಕಬ್ಬು ಬೆಳೆಗಾರರಿಗೆ ಕಬ್ಬು ಸಾಗಾಟಕ್ಕೆ ಯಾರೂ ಅಡ್ಡಿ ಉಂಟು ಮಾಡಬಾರದು ಎಂಬ ಮನವಿಗೆ ರೈತರು ಸಹಕರಿಸಿದ್ದಾರೆ. ಅನೇಕ ರೈತ ಹೋರಾಟಗಾರರು ಕೂಡ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.