ಬೀದರ : ಕೋವಿಡ್ ಎರಡನೇ ಅಲೆ ಪರಿಣಾಮ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ, ಸೋಂಕು ಹತ್ತಿರಕ್ಕೆ ಸುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸ ಮಾಡುವುದು ಆದಷ್ಟು ತಗ್ಗಿಸಬೇಕು. ಮದುವೆ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಂತ್ರಣ ಮಾರ್ಗಸೂಚಿ ಪಾಲಿಸಬೇಕು. ಹಾಗೆಯೇ ಸೋಂಕು ನಿಯಂತ್ರಿಸಲು ವೈದ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ.
ರೋಗಿಗಳು ಚಿಕಿತ್ಸೆ ನೀಡುವ ವೈದ್ಯರಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್ ತಪಾಸಣೆ ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು. ಸೋಂಕಿತರು ಮತ್ತು ಸಂಪರ್ಕಿತರ ಪತ್ತೆ, ತಪಾಸಣೆ ಹಾಗೂ ಚಿಕಿತ್ಸೆ ವಿಳಂಬವಿಲ್ಲದೇ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ತಹಶೀಲ್ದಾರರು, ತಾಪಂ ಇಒ, ಆರೋಗ್ಯಾ ಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿ ಕಾರಿಗಳು ಹಾಗೂ ಪಿಡಿಒಗಳು ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಕೊರೊನಾ ಹರಡುವಿಕೆ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆದು ಲಸಿಕೆಯ ಗುರಿ ಶೇ.100 ಪೂರ್ಣಗೊಳಿಸಬೇಕು. ಕೋವಿಡ್ ಪಾಸಿಟಿವ್ ಪ್ರಕರಣಗಳ ನಿಯಂತ್ರಣ ಹಾಗೂ ಮಾರ್ಗಸೂಚಿಗಳ ಅನುಷ್ಠಾನ ಪಾಲನೆಗೆ ಇನ್ನಷ್ಟು ಬಿಗಿ ಕ್ರಮ ಜರುಗಿಸುವಂತೆ ಜಿಲ್ಲಾಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದ್ದಾರೆ.