ಬೀದರ: ಕೆಲವು ವರ್ಷಗಳಿಂದ ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಹೆಚ್ಚಾಗುತ್ತಿದೆ. ಇದು ಅಪರಾಧವಾಗಿದ್ದು, ಜನರಲ್ಲಿ ಈ ಬಗ್ಗೆ ಹೆಚ್ಚು ತಿಳಿವಳಿಕೆ ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮನಗೊಳಿ ಪ್ರೇಮಾವತಿ ಮಲ್ಲಿಕಾರ್ಜುನ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜವಾಬ್ದಾರಿ ವಹಿಸಿಕೊಂಡು ತಮ್ಮ ಸುತ್ತಮುತ್ತಲಿನ ಜನರಿಗೆ ತಿಳಿವಳಿಕೆ ನೀಡಲು ಮುಂದಾಗಬೇಕು ಎಂದರು.
ಸಂವಿಧಾನದ ಆಶಯದಡಿ ಸರ್ಕಾರವು ವಿದ್ಯಾರ್ಥಿನಿಯರಿಗೆ ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಎಲ್ಲ ವಿದ್ಯಾರ್ಥಿನಿಯರು ಇದರ ಸೌಲಭ್ಯ ಪಡೆಯಬೇಕು. ಹಾಗೆಯೇ ಮೂಲಭೂತ ಕರ್ತವ್ಯಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ರಾಘವೇಂದ್ರ ಮಾತನಾಡಿ, ರಾಷ್ಟ್ರಧ್ವಜ, ರಾಷ್ಟ್ರಗೀತೆಯನ್ನು ಎಲ್ಲ ಸಮಯದಲ್ಲಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅದರಂತೆ ನಮ್ಮ ರಾಷ್ಟ್ರದ ಸಂಪತ್ತು ರಕ್ಷಣೆ ಮಾಡುವುದು ಎಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವಿಠಲದಾಸ ಪ್ಯಾಗೆ, ಉಪ ಪ್ರಾಂಶುಪಾಲ
ಸಂಜುಕುಮಾರ ಹೆಗ್ಡೆ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ ತರನಳ್ಳಿ, ಜಿಲ್ಲಾ ಕಾನೂನು
ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಶಂಕರೆಪ್ಪ ಜನಕಟ್ಟಿ, ಅನೀಲ ಬಿ.ಮೇತ್ರೆ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು
ಉಪಸ್ಥಿತರಿದ್ದರು. ಸಹ ಶಿಕ್ಷಕ ಬಸಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.