ಶಿವಮೊಗ್ಗ: ಕೋವಿಡ್ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿ ಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ 15 ದಿನಗಳ ಕಾಲ ಪ್ರತಿದಿನ ಕನಿಷ್ಟ 3ಸಾವಿರ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆ ನಡೆಸಬೇಕು. ಪ್ರತಿದಿನ 2ಸಾವಿರ ಆರ್‌ಟಿಪಿಸಿಆರ್ ಮತ್ತು 1ಸಾವಿರ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಆರಂಭಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕೊರೊನಾ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾಗಿರುವ ತಪಾಸಣಾ ಕಿಟ್‌ಗಳನ್ನು ಪೂರೈಸಲಾಗುವುದು ಎಂದರು.
ಎಲ್ಲಾ ಸಿದ್ಧತೆ: ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣವಿಲ್ಲದ ಕೋವಿಡ್ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರ್ಯಾಯ ವ್ಯವಸ್ಥೆ: ಕೋವಿಡ್ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆ ಮುಂದಿಟ್ಟು ಹೊರ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವುದು ದುರದೃಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 350ಮಂದಿ ಕೋವಿಡ್ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸಬೇಕಾದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.
ಹೊರಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮುಂದುವರೆಸಲಾಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ಶಿಮ್ಸ್ ನಿರ್ದೇಶಕ ಡಾ| ಸಿದ್ಧಪ್ಪ ಅವರು ಮನವಿ ಮಾಡಿದರು.
ಕ್ರಿಮಿನಲ್ ಮೊಕದ್ದಮೆ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುದ್ದೆಗಳಿಗೆ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಇಂತಹ
ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ
ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಅವರು ಶಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾ ಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್ ಡಾ|ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.