ಬೆಂಗಳೂರು: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಲಿದ್ದು, ಒಟ್ಟಾರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಗ್ಯಾರಂಟಿ ಕಾರ್ಡ್‌ಗಳಿಗೆ ಸಹಿ ಹಾಕಿದ್ದು, ನಾವು ಪ್ರಣಾಳಿಕೆಯಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ನಾವು ಬಸವಣ್ಣನ ನಾಡಿನಿಂದ ಬಂದಿದ್ದು, ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ತಿಳಿಸಿದರು.
ಮೋದಿ ಅವರು ಮಾಂಗಲ್ಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ರೂ. ಇತ್ತು. ಈಗ ಹತ್ತು ವರ್ಷಗಳ ನಂತರ ಅದು 75 ಸಾವಿರಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಾಂಗಲ್ಯ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ಹೇಳಿಕೆ ನಿಜಕ್ಕೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಆರು ಸಾವಿರ ಹುದ್ದೆಗಳ ನೇಮಕಾತಿಗೆ 60 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಇದೇ ದೊಡ್ಡ ಸಾಕ್ಷಿ. ಈ ರಾಜ್ಯದಿಂದ ಯುವಕರು ಉದ್ಯೋಗ ಹುಡುಕಿಕೊಂಡು ಬೆಂಗಳೂರು ಹಾಗೂ ಇತರೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಉತ್ತರ ಪ್ರದೇಶ ಅತ್ಯುತ್ತಮ ರಾಜ್ಯ. ಆದರೆ, ಈ ರಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ವಿಫಲವಾಗಿದ್ದಾರೆ. ಕೇವಲ ಭಾವನಾತ್ಮಕ ವಿಚಾರಗಳ ಮೂಲಕ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ ಹೆಚ್ಚಿನ ಆದ್ಯತೆ ನೀಡಿದ್ದು, ಜಾತಿ ಗಣತಿ ಮೂಲಕ ಎಲ್ಲ ಸಮುದಾಯಗಳ ಸ್ಥಿತಿ ಅರಿತು ಅವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ನಿರ್ಧರಿಸಿದೆ. ಈಗಾಗಲೇ ಕರ್ನಾಟಕದಲ್ಲಿ ಇದಕ್ಕಾಗಿ ಕಾನೂನು ತಂದು ಪರಿಶಿಷ್ಟರಿಗೆ ಜನಸಂಖ್ಯೆಗೆ ಅನುಗುಣವಾಗಿ 39 ಸಾವಿರ ಕೋಟಿ ಅನುದಾನ ನೀಡಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಜಾತಿ ಗಣತಿ ಕಂಡರೆ ಭಯವೇಕೆ ಎಂದು ಪ್ರಶ್ನಿಸಿದರು.
ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಮೋದಿ ಹಿಂದೇಟು; ಆರೋಪ
ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ವಿಚಾರವಾಗಿ ಕೇಳಿದಾಗ, ಎನ್‌ಡಿಎ ಮೈತ್ರಿಕೂಟದ ಪಕ್ಷದ ಸಂಸದನಿಂದ ಈ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ನರೇಂದ್ರ ಮೋದಿ ಹಿಂಜರಿಯುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಪ್ರಧಾನಿ ಮುಸ್ಲಿಂ ಮೀಸಲಾತಿ ವಿಚಾರವಾಗಿ ಮಾಡುತ್ತಿರುವ ಆರೋಪ ಆಧಾರರಹಿತ. ಮುಸ್ಲಿಂರಿಗೆ 30-40 ವರ್ಷಗಳಿಂದ ಮೀಸಲಾತಿ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕೆ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.