ವಿಶ್ವಸಂಸ್ಥೆ:”ಪ್ರಜಾಪ್ರಭುತ್ವದ ವಿಚಾರದಲ್ಲಿ ಭಾರತಕ್ಕೆ ಯಾರಿಂದಲೂ ಪಾಠ ಕೇಳಬೇಕಾದ ಅಗತ್ಯವಿಲ್ಲ.’
ಹೀಗೆಂದು ಹೇಳಿರುವುದು ವಿಶ್ವಸಂಸ್ಥೆಯಲ್ಲಿರುವ ಭಾರತದ ಮೊದಲ ಮಹಿಳಾ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್.
15 ಸದಸ್ಯ ರಾಷ್ಟ್ರಗಳಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಗುರುವಾರ ಭಾರತ ವಹಿಸಿಕೊಂಡಿದೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷತೆ ವಹಿಸಿಕೊಂಡ ಮೊದಲ ದಿನವೇ ಪ್ರಮುಖ ಸ್ಥಾನದಲ್ಲಿ ಕುಳಿತು ರುಚಿರಾ ಕಂಬೋಜ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತದ ಪ್ರಜಾಸತ್ತೆ ಮತ್ತು ಮಾಧ್ಯಮ ಸ್ವಾತಂತ್ರ್ಯದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಿಮಗೆಲ್ಲರಿಗೂ ಗೊತ್ತಿರುವಂತೆ ಭಾರತವು ಜಗತ್ತಿನಲ್ಲೇ ಅತ್ಯಂತ ಪ್ರಾಚೀನ ನಾಗರಿಕತೆಯಾಗಿದೆ. ಇಲ್ಲಿಯವರೆಗೂ ಪ್ರಜಾಪ್ರಭುತ್ವದ ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ನಾಲ್ಕನೇ ಸ್ತಂಭವಾದ ಮಾಧ್ಯಮ- ಎಲ್ಲವೂ ದೃಢವಾಗಿವೆ. ಬಲವಾದ ಸಾಮಾಜಿಕ ಜಾಲತಾಣಗಳೂ ನಮ್ಮಲ್ಲಿವೆ.
ಪ್ರತಿ 5 ವರ್ಷಗಳಿಗೊಮ್ಮೆ ನಾವು ವಿಶ್ವದಲ್ಲೇ ಅತಿದೊಡ್ಡ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸುತ್ತೇವೆ. ಎಲ್ಲರಿಗೂ ಎಲ್ಲ ಸ್ವಾತಂತ್ರ್ಯವನ್ನೂ ನೀಡಿದ್ದೇವೆ. ಪ್ರಜಾಪ್ರಭುತ್ವದ ವಿಚಾರದಲ್ಲಿ ಭಾರತಕ್ಕೆ ಯಾರೂ ಪಾಠ ಹೇಳಬೇಕಾದ ಅಗತ್ಯವಿಲ್ಲ’ ಎಂದಿದ್ದಾರೆ.