ನವದೆಹಲಿ: ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 48,698 ಹೊಸ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 1,183 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಆಪ್ತರಿಬ್ಬರ ಬಂಧನ
ಈಗ ಕೋವಿಡ್ 19 ಪ್ರಕರಣಗಳ ಒಟ್ಟು ಸಂಖ್ಯೆ 3,01,83,143ಕ್ಕೆ ಹೆಚ್ಚಳವಾಗಿದ್ದು, ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 3,94,493ಕ್ಕೆ ಏರಿಕೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,95,565ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ ಈವರೆಗೆ ಒಟ್ಟು 2,91,93,085 ಜನರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಪಾಸಿಟಿವಿಟಿ ದರ ಕೂಡಾ ತೀವ್ರ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.
ಕೋವಿಡ್ ಸೋಂಕು ಇಳಿಕೆಯಾಗುತ್ತಿರುವ ನಡುವೆಯೇ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರು ಗುಂಪುಗೂಡುವುದನ್ನು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಶುಕ್ರವಾರ ಎಂಟು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ.