ನವದೆಹಲಿ:ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 13,405 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಫೆ.22) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹುಮನಾಬಾದ್ ಕಾಲೇಜಿಗೂ ವಿಸ್ತಾರಣೆಗೊಂಡ ಹಿಜಾಬ್- ಕೇಸರಿ ಶಾಲು ವಿವಾದ
ದೇಶದಲ್ಲಿ ಇದೀಗ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಒಟ್ಟು 1,81,075ಕ್ಕೆ ಇಳಿಕೆಯಾಗಿದೆ. 24 ಗಂಟೆಯಲ್ಲಿ 21,056 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಸತತ 16 ದಿನಗಳಿಂದ 50 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.
ಭಾರತದಲ್ಲಿ 24 ಗಂಟೆಯಲ್ಲಿ 235 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,12,344ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಸೋಮವಾರದಿಂದ ಮಂಗಳವಾರ ಬೆಳಗ್ಗೆ 8ಗಂಟೆವರೆಗೆ ದೇಶದಲ್ಲಿ 34,226 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,21,58,510ಕ್ಕೆ ತಲುಪಿದೆ.