ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,401 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,23,22,258ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮತ್ತೆ ಎನ್ ಸಿಎ ಕೋಚ್ ಹುದ್ದೆ ಬಯಸಿದ ರಾಹುಲ್ ದ್ರಾವಿಡ್: ಆಯ್ಕೆ ಕಷ್ಟ ಎನ್ನುತ್ತಿದೆ ನಿಯಮಗಳು
ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 530 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು ಕೋವಿಡ್ ನಿಂದ 4,33,049 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶದಿಂದ ತಿಳಿದುಬಂದಿದೆ.
ಭಾರತದಲ್ಲಿ ಕಳೆದ 149 ದಿನಗಳ ಬಳಿಕ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,54,129ಕ್ಕೆ ಇಳಿಕೆಯಾಗಿದೆ. ಅಲ್ಲದೇ ಕಳೆದ 24ಗಂಟೆಗಳಲ್ಲಿ 39,157 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಈವರೆಗೆ ಒಟ್ಟು 3,15,25,080 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.1.94ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.95ರಷ್ಟಿದೆ. ದೇಶದಾದ್ಯಂತ ಸುಮಾರು 56.64 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.