ಶಹಾಪುರ: ನಗರದ ಸರ್ಕಾರಿ ಪ್ರೌಢಶಾಲಾ ಆಟದ ಮೈದಾನದಲ್ಲಿ ನಿರ್ಮಾಣಯಾಗುತ್ತಿರುವ ಇಂದಿರಾ ಕ್ಯಾಂಟೀನ್ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೂಡೆ ಹಾಗೂ ಪ್ರಭು ಎನ್. ಬಡಿಗೇರ ಭೇಟಿ ನೀಡಿ ಪರಿಶೀಲಿಸಿದರು.
ಸಾಮಾಜಿಕ ಕಾರ್ಯಕರ್ತ ಮಲ್ಲಯ್ಯ ಪೋಲಂಪಲ್ಲಿ ಶಾಲಾ ಮೈದಾನದಲ್ಲಿ ಕ್ಯಾಂಟೀನ್ ನಿರ್ಮಾಣದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಅಲ್ಲದೇ, ಮಕ್ಕಳ ಹಕ್ಕು ಉಲ್ಲಂಘನೆ ಆಗುತ್ತದೆ ಎಂದು ಆರೋಪಿಸಿ, ಈಚೆಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದರು.
ದೂರು ಸ್ವೀಕರಿಸಿದ್ದ ಕಾನೂನು ಸೇವೆಗಳ ಪ್ರಾಧಿಕಾರದ ರಾಜ್ಯ ಕಾರ್ಯದರ್ಶಿ ಸಂಜೀವಕುಮಾರ ಹಂಚಾಟೆ, ಈ ಕುರಿತು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದರು.
ಆ ಹಿನ್ನೆಲೆಯಲ್ಲಿ ಶನಿವಾರ ಸ್ಥಳ ಪರಿಶೀಲಿಸಿದ ಜಿಲ್ಲಾ ಕಾನೂನು ಪ್ರಾಧಿಕಾರ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೂಡೆ, ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಂದ ಸಮರ್ಪಕ ದಾಖಲೆ ಪಡೆದು ಪರಿಶೀಲನೆ ನಡೆಸಿದರು.
ಕಾಲೇಜು ಪ್ರಾಚಾರ್ಯರು ಹಾಗೂ ಸಿಬ್ಬಂದಿ ಸಹ ಈ ಕುರಿತ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಶಾಲಾ ಮೈದಾನ ಜಾಗದಲ್ಲಿ ಕ್ಯಾಂಟೀನ್ ನಿರ್ಮಾಣ ಸರಿಯಲ್ಲ. ಪ್ರಸ್ತುತ ಮಕ್ಕಳ ಆಟಕ್ಕೆ ಜಾಗದ ಕೊರತೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಮಕ್ಕಳ ಆಟದ ಜಾಗದಲ್ಲಿ ಕ್ಯಾಂಟೀನ್ ನಿರ್ಮಾಣದಿಂದ ತೊಂದರೆಯಾಗಲಿದೆ ಎಂದು ತಿಳಿಸಿದರು.
ನಾಗರಿಕರ ಮತ್ತು ಶಾಲಾ ಸಿಬ್ಬಂದಿ ಮನವಿಗೆ ಸ್ಪಂದಿಸಿದ ನ್ಯಾಯಾಧೀಶರು ಸಮಗ್ರ ದಾಖಲೆ ಪರಿಶೀಲಿಸಿ ರಾಜ್ಯ ಕಾನೂನು ಸೇವೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲೆ ಪ್ರಾಚಾರ್ಯ ಡಾ| ಅಬ್ದುಲ್ ಕರೀಂ, ತಹಶೀಲ್ದಾರ್ ಸಂಗಮೇಶ ಜಿಡಗೆ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ ಸೇರಿದಂತೆ ಸಾಮಾಜಿಕ ಕಾರ್ಯಕರ್ತ ಮಲ್ಲಯ್ಯ ಪೋಲಂಪಲ್ಲಿ ಇದ್ದರು.