ಮುಂಬೈ: ಆಸ್ಟ್ರೇಲಿಯ ವಿರುದ್ಧ ಬಾರ್ಡರ್-ಗಾವಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡ ನಂತರ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿದ್ಧವಾಗಿದೆ.
ಸರಣಿಯ ಮೊದಲ ಪಂದ್ಯ ಶುಕ್ರವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಅವರ ಕೌಟುಂಬಿಕ ಕಾರಣದಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿರುವುದರಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಲಿದ್ದಾರೆ.
50 ಓವರ್‌ಗಳ ಮಾದರಿಯಲ್ಲಿ ಟೀಮ್ ಇಂಡಿಯಾವು ಕೊನೆಯದಾಗಿ ನ್ಯೂಜಿಲೆಂಡ್ ವಿರುದ್ಧ ಆಡಿತ್ತು. ಆಸೀಸ್ ವಿರುದ್ಧ ಆಡುವ ಬಳಗದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಆರಂಭಿಕ ಆಟಗಾರರ ಬಗ್ಗೆ ಸ್ಪಷ್ಟನೆ ನೀಡಿದ್ದರು. ಏಕದಿನ ಕ್ರಿಕೆಟ್ ನ ಇತ್ತೀಚಿನ ದ್ವಿಶತಕ ವೀರರಾದ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ತಂಡದ ಆರಂಭಿಕ ಆಟಗಾರರಾಗಿರಲಿದ್ದಾರೆ. ಮುಂದಿನ ಪಂದ್ಯಕ್ಕೆ ರೋಹಿತ್ ಬಂದಾಗ ಬಹುತೇಕ ಇಶಾನ್ ಜಾಗ ತೊರೆಯಬೇಕಾಗಬಹುದು.
ಕಳೆದ ಕೆಲವು ಸಮಯದಿಂದ ತನ್ನ ಫಾರ್ಮ್ ಕಾರಣದಿಂದ ಟೀಕೆ ಎದುರಿಸುತ್ತಿರುವ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಪಂತ್ ಮತ್ತು ಅಯ್ಯರ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಆಡಬಹುದು. ವಿಕೆಟ್ ಕೀಪಿಂಗ್ ಜವಾಬ್ದಾರಿಯೂ ರಾಹುಲ್ ಪಾಲಾಗಬಹುದು.
ಪಂದ್ಯವು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಆಸೀಸ್ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.
ಸಂಭಾವ್ಯ ತಂಡ: ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ (ನಾ), ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್ / ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್