ಹಾವೇರಿ: ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ 19 ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ಗಳನ್ನು ವಿತರಿಸಲ ಕ್ರಮ ವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ರೆಡ್ ಕ್ರಾಸ್ ಸಂಸ್ಥೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡ ಕೋವಿಡ್ 19 ವಾರಿಯರ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರ ಸಭೆ ನಡೆಸಿದ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಹಲವು ತಂಡಗಳನ್ನು ರಚಿಸಿದೆ. ಈ ತಂಡದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಹಾಗೂ ಕೋವಿಡ್ 19 ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕಾರ್ಮಿಕ ಇಲಾಖೆಗೆ ಅನುದಾನ ಬಿಡುಗಡೆಯಾಗಿದೆ. ಈ ಕುರಿತಂತೆ ಕಾರ್ಯಕ್ರಮ ಆಯೋಜಿಸಿ ಸರ್ಕಾರದ ಮಾರ್ಗಸೂಚಿಯಂತೆ ಸ್ವಯಂ ಸೇವಕರನ್ನು ಬಳಸಿಕೊಂಡು ಜಾಗೃತಿಯೊಂದಿಗೆ ಪರಿಕರಗಳನ್ನು ವಿತರಿಸಲು ಕ್ರಮವಹಿಸುವಂತೆ ಸಲಹೆ ನೀಡಿದರು.
ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳ ಮೇಲೆ ನಿಗಾ, ಸಹಾಯವಾಣಿಗಳ ಕಾರ್ಯನಿರ್ವಹಣೆ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕುರಿತಂತೆ ಹರಡುವ ಸುಳ್ಳು ಸುದ್ದಿಗಳನ್ನು ಗಮನಿಸಿ ನೈಜತೆಯನ್ನು ತಿಳಿಸುವ ನಿಟ್ಟಿನಲ್ಲಿ ಸ್ವಯಂಸೇವಕರು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ನೋಂದಾಯಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ 19 ಸುರಕ್ಷತಾ ಕಿಟ್ ವಿತರಿಸಲು ಹಾಗೂ ಅವರಿಗೆ ಜಾಗೃತಿ ಮೂಡಿಸಲು 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅಂದಾಜು 60 ಸಾವಿರ ಕಾರ್ಮಿಕರು ಜಿಲ್ಲೆಯಲ್ಲಿದ್ದಾರೆ. ಈ ಕಾರ್ಮಿಕರಿಗೆ ಕೋವಿಡ್ 19 ಸುರಕ್ಷತೆಗಾಗಿ ಮಾಸ್ಕ್, ಸೋಪು, ಸ್ಯಾನಿಟೈಸರ್ ಒಳಗೊಂಡು ಕಿಟ್ ವಿತರಿಸಲಾಗುವುದು. ಮನೆ ಮನೆಗೆ ಕೊರೊನಾ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳ ಕುರಿತಂತೆ ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಿ, ವಿತರಿಸಿ ಜಾಗೃತಿ ಮೂಡಿಸಲಾಗುವುದು ಎಂದು ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾರ್ಯದರ್ಶಿ ಡಾ|ನಿಲೇಶ್, ಕಾರ್ಮಿಕ ಅಧಿಕಾರಿ ಕಲಾವತಿ ಸಾತೇನಹಳ್ಳಿ, ವಾರ್ತಾಧಿಕಾರಿ ಬಿ.ಆರ್. ರಂಗನಾಥ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ವಿವಿಧ ಸ್ವಯಂಸೇವಕರು ಸಭೆಯಲ್ಲಿ ಭಾಗವಹಿಸಿದ್ದರು.