ಬೆಂಗಳೂರು: ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಆಕ್ಷೇಪಿಸಿ ನಾಲ್ವರು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸುಂತೆ ಕೋರಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 6ಕ್ಕೆ ಮುಂದೂಡಿದೆ.
ಗೌರಿಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಜಿತ್‌ಕುಮಾರ್, ಮನೋಹರ ಯಡವೆ, ಅಮೋಲ್ ಕಾಳೆ, ಅಮಿತ್ ದಗ್ವೇಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ. ಅರವಿಂದಕುಮಾರ್ ಅವರಿದ್ದ ಏಕಸದಸದಸ್ಯಪೀಠ ಮಂಗಳವಾರ ಕೆಲಕಾಲ ಆಲಿಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರನ್ನು ಪ್ರತಿವಾದಿಗಳ ಪಟ್ಟಿಯಿಂದ ಕೈ ಬಿಡುವಂತೆ ಸೂಚಿಸಿತು.ಅಲ್ಲದೆ, ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಅರ್ಜಿ ಬದಲಾವಣೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ತಮಗೆ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡುತ್ತಿಲ್ಲ. ಇದರಿಂದ ನಮ್ಮ ಸಾಂವಿಧಾನಿಕ ಹಕ್ಕು ಮೊಟಕುಗೊಳ್ಳುತ್ತಿದೆ. ಹೀಗಾಗಿ, 5ನೇ ಎಸಿಎಂಎಂ,3ನೇ ಎಸಿಎಂಎಂ, 1 ಹಾಗೂ 44ನೇ ಎಸಿಎಂಎಂ ನ್ಯಾಯಾಧೀಶರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಬೇಕು.
ಜತೆಗೆ ಅಧೀನ ನ್ಯಾಯಾಲಯಗಳಲ್ಲಿರುವ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಿ, ಆರೋಪಿತ ನ್ಯಾಯಾಧೀಶರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ.