Advertisement

ಜಲ ಸಂರಕ್ಷಣಾ ಯೋಜನೆಗಳ ಪರಿಶೀಲನೆ

02:24 PM Aug 26, 2019 | Suhan S |

ಗೌರಿಬಿದನೂರು: ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾವ ರೀತಿ ಅನುಷ್ಠಾನಗೊಳಿಸಲಾಗಿದೆ ಎಂಬ ಬಗ್ಗೆ ದಿಢೀರ್‌ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್‌ ತಿಳಿಸಿದರು.

Advertisement

ತಾಲೂಕಿನ ವಿವಿಧ ಹೋಬಳಿಗಳಲ್ಲಿನ ಆಯ್ದ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಜಿಯಾ ತರನ್ನುಮ್‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಆಯ್ದ ಪಂಚಾಯಿತಿಗಳಿಗೆ ಭೇಟಿ ನೀಡಿ ಅಂತರ್ಜಲ ಸಂರಕ್ಷಣೆಗೆ ರೂಪಿಸಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಪಂಚಾಯಿತಿಗಳಿಂದ ಮಾಹಿತಿ ಪಡೆದರು.

ಯೋಜನೆಗಳ ಪರಿಶೀಲನೆ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತವಾಗಿ ದಶಕಗಳೇ ಕಳೆದಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂತರ್ಜಲ ಹೆಚ್ಚಿಸಲು ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಪಟ್ಟಿಯಲ್ಲಿ ಜಿಲ್ಲೆಗೆ ಸ್ಥಾನ: ಕೇಂದ್ರ ಸರ್ಕಾರ ರಾಷ್ಟ್ರೀಯ ಮಟ್ಟದಲ್ಲಿ 242 ಜಿಲ್ಲೆಗಳಲ್ಲಿ ಅಂತರ್ಜಲ ಕುಸಿತ ಮತ್ತು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದೆ ಎಂದು ಪಟ್ಟಿ ಮಾಡಿದ್ದು, ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಸೇರಿದೆ. ಮುಂಬರುವ ದಿನಗಳಲ್ಲಿ ಅಂತರ್ಜಲ ಸಂರಕ್ಷಣಾ ಯೋಜನೆಗಳನ್ನು ಪರಿಶೀಲನೆ ನಡೆಸಲು ಬರಲಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸುವ ಸಲುವಾಗಿ ಕೆಲವು ಪಂಚಾಯಿತಿಗಳಿಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಕಾರ್ಯಾನುಷ್ಠಾನದ ಬಗ್ಗೆ ಪರಿಶೀಲನೆ: ಜಿಲ್ಲೆಗಳಲ್ಲಿ ಜಲಸಂರಕ್ಷಣೆಗಾಗಿ ನರೇಗಾ, ಕೃಷಿಹೊಂಡ, ಜಮೀನಿನಲ್ಲಿ ಬದುಗಳ ನಿರ್ಮಾಣ, ಗಿಡಗಳ ನಾಟಿ, ಮಳೆಕೊಯ್ಲು ಇವುಗಳ ಕಾರ್ಯಾನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು ಎಂದರು.

Advertisement

ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 36 ಕಡೆಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಹೊಸೂರಿನಲ್ಲಿ ಪ್ರಾಯೋಗಿಕವಾಗಿ ಕಳೆದ ವರ್ಷ 12 ಲಕ್ಷ ರೂ.ವೆಚ್ಚದಲ್ಲಿ ಪ್ರಾರಂಭಿಸಿರುವ ತ್ಯಾಜ್ಯ ನಿರ್ವಹಣಾ ಘಟಕವನ್ನು ಉನ್ನತೀಕರಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಪಂ ಸಿಇಒ ಫೌಜಿಯಾ ತರನ್ನುಮ್‌ ಅವರೊಂದಿಗೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಪಂ ಇಒ ಮುನಿರಾಜು, ಹೊಸೂರು ಗ್ರಾಪಂ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣರಾವ್‌, ಹಾಲಿ ಅಧ್ಯಕ್ಷ ತಿರುಮಲೇಶ್‌, ನರೇಗಾ ಸಹಾಯಕ ನಿರ್ದೇಶಕ ಚಿನ್ನಪ್ಪ, ಜಿಪಂ ನೀರು ಸರಬರಾಜು ವಿಭಾಗದ ಪ್ರಭಾರಿ ಸಹಾಯಕ ಅಭಿಯಂತರರಾದ ಆದಿನಾರಾಯಣಪ್ಪ, ಅಂಬರೀಶ್‌ ಯಾದವ್‌, ರಮೇಶ್‌, ವೆಂಕಟೇಶ್‌, ಪಿಡಿಒಗಳಾದ ಕರಿಯಪ್ಪ, ಫ‌ಯಾಜ್‌, ಮಡಿವಾಳಪ್ಪ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next