Advertisement

ಮಳೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

02:31 PM Oct 04, 2020 | sudhir |

ಗದಗ: ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲಿರುವ ಮನೆಗಳನ್ನು ಗುರುತಿಸಿ, ಅವುಗಳಲ್ಲಿ ವಾಸ ಮಾಡುವ ಜನಜಾನುವಾರುಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಡಳಿತ ಭವನದ ಜಿ.ಪಂ. ವಿಡಿಯೋ ಕಾನ್ಫರೆನ್ಸ್‌ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ, ಆರೋಗ್ಯ ಇಲಾಖಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಅತೀಯಾದ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆ ಹಾಗೂ ಜಾನುವಾರುಗಳ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು.

ಬೆಳೆ ಸಮೀಕ್ಷಾ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗಬಾರದು. ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಪರಿಹಾರ ಪೋರ್ಟ್‌ನಲ್ಲಿ ನೋಂದಾಯಿಸಬೇಕು ಎಂದು ತಿಳಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಪ್ರತಿಯೊಬ್ಬರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಈ ಕುರಿತು ಜಾಗೃತಿ ಮೂಡಿಸಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲು ಕ್ರಮ ಜರುಗಿಸಬೇಕು.

ಪಶ್ಚಿಮ ಪದವೀಧರರ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಪ್ರಥಮ ಬಾರಿಗೆ ಕೋವಿಡ್‌-19 ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತಿದ್ದು, ಕೋವಿಡ್‌-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಚುನಾವಣೆ ಜರುಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಸೂಚಿಸಿದರು.

Advertisement

ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್‌. ಎನ್‌. ರುದ್ರೇಶ್‌, ಎಲ್ಲ ತಾಲೂಕುಗಳು ತಹಶೀಲ್ದಾರ್‌, ತಾಪಂ ಇಒ, ಆರೋಗ್ಯ, ಕೃಷಿ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next