Advertisement
ಉಪಚುನಾವಣೆ ಘೋಷಣೆಯಾಗಿರುವ ಕೆ.ಆರ್.ಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ, ಚಿಕ್ಕಬಳ್ಳಾಪುರ, ಕೆ.ಆರ್.ಪೇಟೆ, ಹುಣಸೂರು ಕ್ಷೇತ್ರಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷ ಕೈಗೊಳ್ಳುವ ನಿರ್ಧಾರದಂತೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.
Related Articles
Advertisement
ರಾಜರಾಜೇಶ್ವರಿನಗರ ಕ್ಷೇತ್ರ ಕುರಿತು ಚರ್ಚೆ: ಸದ್ಯ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿಲ್ಲ. ಅನರ್ಹತೆಗೊಂಡ ಶಾಸಕ ಮುನಿರತ್ನ ಗೆಲುವು ಪ್ರಶ್ನಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ನಡೆದಿದೆ. ಈ ಪ್ರಕರಣ ಹಿಂಪಡೆದು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಮುನಿರತ್ನ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತಿದ್ದಾರೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಮುನಿರತ್ನ ಸ್ಪರ್ಧೆಗೆ ಅವಕಾಶ ನೀಡಬೇಕೆ, ಬೇಡವೇ ಎಂಬ ಕುರಿತೂ ಹಲವು ಅಭಿಪ್ರಾಯಗಳು ವ್ಯಕ್ತವಾದವು.
ಅಂತಿಮವಾಗಿ ಅನರ್ಹತೆಗೊಂಡ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತರೆ ಎಲ್ಲರಿಗೂ ಪಕ್ಷದ ವತಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿದ್ದು, ಆ ಮಾತು ಉಳಿಸಿಕೊಳ್ಳಬೇಕಿದ್ದು, ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು ಎನ್ನಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಅರುಣ್ ಕುಮಾರ್ (ಸಂಘಟನೆ), ಎನ್.ರವಿಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕ ಎಸ್.ರಘು ಇತರರು ಉಪಸ್ಥಿತರಿದ್ದರು.
ದಿಢೀರ್ ಬುಲಾವ್ – ಅಸಮಾಧಾನ: ರಾಜ್ಯದಲ್ಲಿ ಮತ್ತೆ ಹಲವೆಡೆ ನೆರೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡಿದ್ದರು. ಸಭೆ ಆರಂಭವಾದ ಕೆಲವೇ ಹೊತ್ತಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದಿರುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದಿಂದ ಕರೆ ಬಂತು. ಇದರಿಂದ ಕೋಪಗೊಂಡ ಯಡಿಯೂರಪ್ಪ ಅವರು ಬೇಸರದಿಂದಲೇ ವಿಡಿಯೋ ಸಂವಾದ ಮೊಟಕುಗೊಳಿಸಿ ಬಿಜೆಪಿ ಕಚೇರಿಯತ್ತ ತೆರಳಿದರು.
ಈ ಬಗ್ಗೆ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು ಎನ್ನಲಾಗಿದೆ. ಹಳೆ ಮೈಸೂರು ಭಾಗದ ಎಂಟು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರ ಪ್ರಮುಖರ ಸಭೆ ಬುಧವಾರ ನಿಗದಿಯಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿ ಸಮಯ ನಿಗದಿಪಡಿಸಲಾಗಿತ್ತು. ಆದರೆ ಸಂವಹನ ಕೊರತೆಯಿಂದ ಮುಖ್ಯಮಂತ್ರಿಗಳ ಕಾರ್ಯಕಲಾಪ ಪಟ್ಟಿಯಲ್ಲಿ ಸೇರ್ಪಡೆಯಾಗಿರಲಿಲ್ಲ ಎಂದು ಮೂಲಗಳು ಹೇಳಿವೆ.