ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ 5 ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳು ಹಾಗೂ 12 ವಸತಿ ಶಾಲೆಗಳ ನಿರ್ಮಾಣಕ್ಕೆ ಚಾಲನೆ ನೀಡಲು ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಮುಂದಿನ ಸಚಿವ ಸಂಪುಟ ಸಭೆಯ ನಂತರ ಆಯವ್ಯಯದಲ್ಲಿ ಘೋಷಿಸಿರುವ ಈ ವಿಧ್ಯಾರ್ಥಿ ನಿಯಲಗಳು ಮತ್ತು ವಸತಿ ಶಾಲೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಒಟ್ಟು 400 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 5 ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅನುದಾನ ಒಟ್ಟುಗೂಡಿಸಿ, ವೆಚ್ಚ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ 100 ಅಂಬೇಡ್ಕರ್ ವಸತಿ ಶಾಲೆಗಳು ಹಾಗೂ 12 ಕ್ರೈಸ್ ವಸತಿ ಶಾಲೆಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಲಭ್ಯವಿರುವ 243 ಕೋಟಿ ರೂ. ಬಳಸಿಕೊಂಡು ಕಾಮಗಾರಿ ಪ್ರಾರಂಭಿಸುವಂತೆ ಸೂಚಿಸಿದ ಮುಖ್ಯಮಂತ್ರಿಯವರು ಯೋಜನೆಯ ಪ್ರಗತಿಗನುಸಾರವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿಯೂ ಎಸ್.ಸಿ.ಪಿ.-ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನವನ್ನು ನಿಗದಿತ ವೇಳಾಪಟ್ಟಿಯಂತೆ ವೆಚ್ಚ ಮಾಡುವಂತೆ ಸಿಎಂ ಇದೇ ವೇಳೆ ತಾಕೀತು ಮಾಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಎಲ್ .ಕೆ. ಅತೀಕ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ. ಮಣಿವಣನ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್‌ರೂಪ್ ಕೌರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.