ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಸರ್ವೇದಾರರನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರಿಗೆ ಸಕ್ರಮ ಮಂಜೂರಾತಿ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಸೋಮವಾರ ಜರಗಿದ ಜಿಲ್ಲಾಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ವರ್ಗಾವಣೆ ಮುಂತಾದ ಹಲವು ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡುವಂತೆ ಹಾಗೂ ರೈತರ ಜಮೀನುಗಳಿಗೆ ದಾರಿ ನೀಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಂದಾಯ ಕೋರ್ಟ್‌ನಲ್ಲಿ ರೈತರ ಹಲವು ಪ್ರಕರಣಗಳು ಇನ್ನೂ ಬಾಕಿಯಿವೆ. ಆ ಎಲ್ಲ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸುವಂತೆ ಸೂಚಿಸಲಾಗಿದೆ. ಎಡಿಸಿಗಳಿಗೆ, ತಹಶೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೂ ಕೂಡ ಅತಿ ಶೀಘ್ರದಲ್ಲೆ ಪ್ರಕರಣ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ. ಮಳೆ ಹಾನಿಯಿಂದ ಜಮೀನಿನಲ್ಲಿ ಮಣ್ಣು ಕೊಚ್ಚಿ ಹೋದರೂ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ರೈತರಿಗೆ ಸರಿಯಾದ ರೀತಿಯಲ್ಲಿ ಬೆಳೆ ವಿಮೆ ತಲುಪಬೇಕು. ರೈತರಿಗೆ ಬ್ಯಾಂಕ್‌ಗಳಲ್ಲಿ ಸುಲಭವಾಗಿ ಸಾಲ ಸಿಗುವಂತಾಗಲು ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ಮನೆ ನಿರ್ಮಾಣದ ಸಂಬಂಧ ಅರ್ಜಿ ಹಾಕಿ ಇನ್ನೂ ಮನೆ ನಿರ್ಮಾಣಕ್ಕೆ ಮುಂದಾಗದವರ ಅರ್ಜಿಯನ್ನು ತಿರಸ್ಕರಿಸಿ ತುರ್ತಾಗಿ ಮನೆ ಕಟ್ಟುವವರಿಗೆ ಅನುಕೂಲ ಮಾಡಿಕೊಡುವಂತೆ ಸೂಚನೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಹೆರಿಗೆ ವೇಳೆ ತಾಯಿ ಮತ್ತು ಮಗುವಿನ ಸಾವಿನ ಪ್ರಮಾಣ ಅಧಿಕವಾಗಿದೆ. ಆ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ತಗ್ಗಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಬಡ ಜನರಿಗೆ ನೀಡಬೇಕಾದ ಆರೋಗ್ಯ ಸೌಲಭ್ಯಗಳ ದೊರೆಯುವಿಕೆ ಸಂಬಂಧ ಚರ್ಚಿಸಿದ್ದಾರೆ ಎಂದು ಹೇಳಿದರು.
3,047 ಹೊಸ ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 954 ಕಂದಾಯ ಗ್ರಾಮಗಳಲ್ಲಿ ಹಕ್ಕುಪತ್ರ ಕೂಡ ವಿತರಿಸಲಾಗಿದೆ ಎಂದು ತಿಳಿಸಿದರು.