ಹುಬ್ಬಳ್ಳಿ: ಹು-ಧಾ ರಸ್ತೆಗಳು, ಬೈಪಾಸ್ ರಸ್ತೆಗಳು ಹಾಗೂ ಹೆದ್ದಾರಿಗಳ ಕಾಮಗಾರಿಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು.
ಬೆಂಗಳೂರಿನ ವಿಧಾನಸೌಧದಲ್ಲಿ ಹು-ಧಾ ಭಾಗದ ಕೆಆರ್‌ಡಿಸಿಎಲ್, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕಾಮಗಾರಿಗಳ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಹು-ಧಾ ಬೈಪಾಸ್ ರಸ್ತೆಯನ್ನು ಆರು ಲೈನ್‌ಗೆ ಉನ್ನತೀಕರಿಸುವ ಕಾಮಗಾರಿ ಇನ್ನೂ ಪ್ರಾರಂಭವಾಗದೇ ಇರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿದರು. ಈ ಹಿಂದೆ ನಡೆದ ಸಭೆಯಲ್ಲಿ ಅಗತ್ಯವಿರುವ ಅನುಮತಿಗಳನ್ನು ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಪ್ರಾರಂಭಿಸದೇ ಇರುವುದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಕಾಮಗಾರಿಯನ್ನು ಈ ಕೂಡಲೇ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಹು-ಧಾ ಬೈಪಾಸ್ ರಸ್ತೆಯನ್ನು ಆರು ಲೈನ್‌ಗೆ ಉನ್ನತೀಕರಿಸುವ ಕಾಮಗಾರಿ ಪ್ರಾರಂಭಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಈಗಾಗಲೇ ಖೇಣಿ ಅವರೊಂದಿಗೆ ಮಾತನಾಡಿ ಕಾಮಗಾರಿ ಪ್ರಾರಂಭದ ಬಗ್ಗೆ ಇದ್ದ ಗೊಂದಲಗಳನ್ನು ಸರಿಪಡಿಸಿಕೊಳ್ಳಲಾಗಿದೆ. ಈ ಕಾಮಗಾರಿಯ ಪ್ರಾರಂಭಕ್ಕೆ ಇರುವ ತೊಡಕುಗಳನ್ನು ನಿವಾರಿಸಿಕೊಳ್ಳಲು ರಾಜ್ಯ ಹಾಗೂ ಕೇಂದ್ರ ಸರಕಾರದ ಅನುಮತಿಗಳನ್ನು ಕೊಡಿಸುತ್ತೇವೆ. ಸಮಸ್ಯೆ ಇಲ್ಲದ ಹಾಗೂ ತುರ್ತು ಕಾಮಗಾರಿಗಳನ್ನು ಪ್ರಾರಂಭಿಸಲು ಸಾಧ್ಯವಿರುವ ಕಡೆ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನವಲಗುಂದ, ನರಗುಂದ ಬೈಪಾಸ್ ರಸ್ತೆಗಳ ಸಂಬಂಧಿತ ಕೆಲಸಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಲಾಯಿತು. ಮುಂದಿನ ವಾರ ಖೇಣಿ ಅವರೊಂದಿಗೆ ಸಭೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್ ಅವರಿಗೆ ತಿಳಿಸಲಾಯಿತು.
ವಾರದೊಳಗೆ ಆಗಿರುವ ಪ್ರಗತಿ ತಿಳಿಯುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಲು ನಿರ್ಧರಿಸಲಾಯಿತು. ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಲೋಕೋಪಯೋಗಿ ಇಲಾಖೆ, ಕೆಆರ್ ಡಿಸಿಎಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.