Advertisement

ಕೃಷಿ ಉತ್ಪಾದನೆ ಹೆಚ್ಚಿಸಲು ಸಮಗ್ರ ಕೃಷಿ ಅಭಿಯಾನ

09:00 PM Jun 07, 2019 | Team Udayavani |

ಚಿಕ್ಕಬಳ್ಳಾಪುರ: ಕೃಷಿ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸಲು ಅವಶ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಜೊತೆಗೆ ಇಲಾಖೆಗಳಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಹಸಿರು ನಿಶಾನೆ ತೋರಿದ ಬಳಿಕ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶುಸಂಗೋಪನೆ ಇಲಾಖೆಗಳ ಯೋಜನೆಗಳ ಕುರಿತು ರೈತರಿಗೆ ಸಮಗ್ರ ಮಾಹಿತಿ ತಲುಪಿಸಲು ಜಿಲ್ಲಾದ್ಯಂತ ಜಾಗೃತಿ ರಥ ಸಂಚರಿಸಲಿದೆ ಎಂದರು.

ರೈತರೊಂದಿಗೆ ಸಂವಾದ: ರೈತರ ಆರ್ಥಿಕ ಸಬಲಿಕರಣಕ್ಕೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರ ಈ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಅನೇಕ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ರೈತರಿಗೆ ಸಮರ್ಪಕವಾಗಿ ಅರಿವು ಇಲ್ಲ.

ಸಮಗ್ರವಾಗಿ ಮಾಹಿತಿ ನೀಡಲು ಈ ಕೃಷಿ ಮಾಹಿತಿ ರಥಕ್ಕೆ ಚಾಲನೆ ನೀಡಲಾಗಿದೆ. 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಡಿ ಸಮಗ್ರ ಕೃಷಿ ಮಾಹಿತಿ ಘಟಕ ಕಾರ್ಯ ನಿರ್ವಹಿಸಲಿದೆ. ಅಭಿಯಾನದ ಭಾಗವಾಗಿ ವಸ್ತು ಪ್ರದರ್ಶನ ಮತ್ತು ವಿಜ್ಞಾನಿಗಳೊಂದಿಗೆ ರೈತರ ಸಂವಾದವು ನಡೆಯಲಿದೆ ಎಂದು ತಿಳಿಸಿದರು.

ಕರಪತ್ರ ಹಂಚಿಕೆ: ಕೃಷಿ ಭಾಗ್ಯ, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ಕೃಷಿ ಯಂತ್ರಧಾರೆ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಸೇರಿದಂತೆ ಸರ್ಕಾರ ರೈತರ ಕಲ್ಯಾಣಕ್ಕಾಗಿ ಆಯೋಜಿಸಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯ ವಿವರಗಳಿರುವ ಕರ ಪತ್ರಗಳನ್ನು ರೈತರಿಗೆ ವಿತರಿಸಲಾಗುವುದು ಎಂದರು.

Advertisement

ಕೃಷಿ ಹೊಂಡ ನಿರ್ಮಾಣ: ರಾಜ್ಯದಲ್ಲಿಯೇ ಅತೀ ಹೆಚ್ಚು ಬರಗಾಲಕ್ಕೆ ತುತ್ತಾಗುವ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮುಖಾಂತರ ಕೃಷಿ ಹೊಂಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದ್ದು, ಕೃಷಿ ಹೊಂಡಗಳ ನಿರ್ಮಾಣದ ವೇಳೆ ಸುತ್ತಲೂ ಅವಘಡಗಳು ಸಂಭವಿಸದಂತೆ ತಂತಿಬೇಲಿ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.

ಬಿತ್ತನೆ ಬೀಜ ವಿತರಣೆ: ಇದೇ ಸಂದರ್ಭದಲ್ಲಿ ಕೃಷಿ ಸಚಿವರು ಕೃಷಿ ಇಲಾಖೆಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ದೃಢೀಕೃತ ಬಿತ್ತನೆ ಬೀಜಗಳನ್ನು ಫ‌ಲಾನುಭವಿಗಳಿಗೆ ವಿತರಿಸಿದರು. ಉಪಸ್ಥಿತರಿದ್ದ ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು ಕೃಷಿ ಸಚಿವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಹೆಚ್‌.ವಿ.ಮಂಜುನಾಥ್‌, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಅಪರ ಜಿಲ್ಲಾಧಿಕಾರಿ ಆರತಿ, ಜಿಪಂ ಸಿಇಒ ಗುರುದತ್‌ ಹೆಗಡೆ, ಜಿಪಂ ಉಪಾಧ್ಯಕ್ಷೆ ನಿರ್ಮಲ, ಜಿಪಂ ಸದಸ್ಯ ಕೆ.ಎಂ.ಮುನೇಗೌಡ ಸೇರಿದಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರೂಪ ಉಪಸ್ಥಿತರಿದ್ದರು.

ಜಿಲ್ಲೆಗೆ ಆರು ಮಾಹಿತಿ ರಥ ಸಂಚಾರ: ಜಿಲ್ಲೆಯ ಆರು ತಾಲೂಕುಗಳಲ್ಲಿ ಕೃಷಿ ಮಾಹಿತಿ ರಥದ ಒಟ್ಟು 6 ವಾಹನಗಳಿಗೆ ಚಾಲನೆ ನೀಡಲಾಗಿದ್ದು, ಪ್ರತಿ ವಾಹನವು 10 ದಿನಗಳ ಕಾಲ ಪ್ರತಿ ತಾಲೂಕಿನ ಗ್ರಾಪಂ ಕೇಂದ್ರ ಹಾಗೂ ಗ್ರಾಮಗಳಲ್ಲಿ ರಥ ಸಂಚರಿಸಲಿದೆ. ಸರ್ಕಾರ ಜಾರಿ ಮಾಡಿರುವ ರೈತ ಪರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಕುರಿತು ರೈತರಿಗೆ ಅರಿವು ಮೂಡಿಸಲಾಗುವುದು ಎಂದು ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು.

ವಿಶೇಷವಾಗಿ ಸಮಗ್ರ ಕೃಷಿ ಪದ್ಧತಿ ಹಾಗೂ ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ಕುರಿತು ರೈತರೊಂದಿಗೆ ಸಂವಾದ, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ನಿರೀಕ್ಷಿಸಿದ್ದು, ಶೇ.30 ರಷ್ಟು ಹೆಚ್ಚಿನ ಆಹಾರ ಉತ್ಪನ್ನಗಳನ್ನು ಉತ್ಪಾದನೆ ನಿರೀಕ್ಷಿಸಲಾಗಿದೆ. ರಾಜ್ಯ ಸರ್ಕಾರ ವಿಶೇಷವಾಗಿ ಇಸ್ರೇಲ್‌ ಕೃಷಿ ಪದ್ಧತಿಗೆ ಒತ್ತು ಕೊಟ್ಟಿದ್ದು, ಸಿರಿಧಾನ್ಯ ಬೆಳೆಯುವ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಜಿಲ್ಲೆಯ ರೈತರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು.
-ಎನ್‌.ಹೆಚ್‌.ಶಿವಶಂಕರರೆಡ್ಡಿ, ಕೃಷಿ ಸಚಿವರು

Advertisement

Udayavani is now on Telegram. Click here to join our channel and stay updated with the latest news.

Next