ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ 7514 ಕಿಲೋ ಮೀಟರ್ ನಷ್ಟು ಉದ್ದದ ಕರಾವಳಿ ಪ್ರದೇಶದ ಮೂಲಕ ಪಾಕಿಸ್ತಾನ ದಾಳಿ ನಡೆಸುವ ಸಾಧ್ಯತೆ ಇದ್ದಿರುವುದಾಗಿ ಭಾರತೀಯ ನೌಕಾದಳ ಎಚ್ಚರಿಕೆಯನ್ನು ನೀಡಿದೆ ಎಂದು ವರದಿ ತಿಳಿಸಿದೆ.
370ನೇ ವಿಧಿಯನ್ನು ರದ್ದುಗೊಳಿಸಿ, ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇತ್ತೀಚೆಗೆ ಘೋಷಿಸಿತ್ತು. ಭಾರತದ ನಿರ್ಧಾರಕ್ಕೆ ಪಾಕಿಸ್ತಾನ ಆಕ್ಷೇಪ ಕೂಡಾ ವ್ಯಕ್ತಪಡಿಸಿತ್ತು.
ಪಾಕಿಸ್ತಾನ ಸೇನಾ ಮುಖ್ಯಸ್ಥ ಒಮರ್ ಜಾವೇದ್ ಬಾಜ್ವಾ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ರದ್ದುಪಡಿಸಿದ್ದಕ್ಕೆ ನೀಡಿರುವ ಪ್ರತಿಕ್ರಿಯೆಯಲ್ಲಿ ತಮ್ಮ ಕನಸನ್ನು ಈಡೇರಿಸಿಕೊಳ್ಳಲು ಯಾವುದಕ್ಕೂ ನಾವು ಸಿದ್ದರಿದ್ದೇವೆ ಎಂದು ಹೇಳಿರುವುದನ್ನೂ ಗುಪ್ತಚರ ಇಲಾಖೆ ಅಧಿಕಾರಿಗಳು ವಿಶ್ಲೇಷಿಸಿರುವುದಾಗಿ ವರದಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಗಳ ಪೂರ್ವ ಹಾಗೂ ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸುವಂತೆ ಸೂಚನೆ ನೀಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಂಜಾಬ್ ಮತ್ತು ರಾಜಸ್ಥಾನದ ಮೇಲೆ ಪಾಕಿಸ್ತಾನ ದಾಳಿ ನಡೆಸುವ ಸಾಧ್ಯತೆ ಇದ್ದಿರುವುದಾಗಿಯೂ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಜಾಹಿದೀನ್ ಪಡೆಯನ್ನು ಉಪಯೋಗಿಸಿ ಪಾಕಿಸ್ತಾನ ಪಂಜಾಬ್, ರಾಜಸ್ಥಾನ್ ಗಡಿಯೊಳಗೆ ನುಸುಳಿ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಮತ್ತೊಂದು ವರದಿ ತಿಳಿಸಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ಕೂಡಲೇ ಕೇಂದ್ರ ಸರಕಾರ ಹೆಚ್ಚುವರಿ ಸೇನಾಪಡೆಯನ್ನು ಗಡಿನಿಯಂತ್ರಣ ರೇಖೆ ಸಮೀಪ ನಿಯೋಜಿಸಿರುವುದಾಗಿ ವರದಿ ವಿವರಿಸಿದೆ.