ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದ್ದು, ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭವಾಗಲಿದೆ.
ಇದನ್ನೂ ಓದಿ:ಉಕ್ರೇನ್ ಮೇಲೆ ಯುದ್ಧ; ರಷ್ಯಾ ಮಾರುಕಟ್ಟೆಯಿಂದ ಹೊರನಡೆದ Apple ಕಂಪನಿಗಾಗುವ ನಷ್ಟ ಎಷ್ಟು?
ಕೋವಿಡ್ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳ ಬಳಿಕ ಮಾ.27ರಿಂದ ಅಂತಾರಾಷ್ಟ್ರೀಯ ವಿಮಾನ ಪುನರಾರಂಭಗೊಳ್ಳುತ್ತಿದೆ. ಜಾಗತಿಕವಾಗಿ ಲಸಿಕೆ ನೀಡುವಿಕೆ ಪ್ರಮಾಣ ಹೆಚ್ಚಳವಾಗಿರುವುದನ್ನು ಗಮನಿಸಿದ ನಂತರ ಸಮಾಲೋಚನೆ ನಡೆಸಿದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ ಸಂದರ್ಭದಲ್ಲಿ ಏರ್ ಬಬ್ಬಲ್ ಒಪ್ಪಂದದಡಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರ ಮುಂದುವರಿದಿತ್ತು. ಆದರೆ ಇದೀಗ ಸಂಪೂರ್ಣ ನಿರ್ಬಂಧ ವಾಪಸ್ ಪಡೆದಿದ್ದು, ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದ್ಯಾ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಪ್ರಯಾಣದ ವೇಳೆಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸಂಸ್ಥೆಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.