ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21ರಂದು ಮೈಸೂರಿಗೆ ಆಗಮಿಸುತ್ತಿದ್ದು, ಅಂದು ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಮಿತಿಯೊಂದನ್ನು ರಚಿಸಿ ಸಿದ್ಧತೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದರು, ಎಲ್ಲ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳು ಹಾಗೂ ವಿವಿಧ ಯೋಗ ಸಂಸ್ಥೆಗಳ ಮುಖಂಡರನ್ನು ಸಮಿತಿ ಒಳಗೊಂಡಿರಲಿದೆ ಎಂದು ತಿಳಿಸಿದರು.
ಯೋಗ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮವಾಗಿಲ್ಲ. ಅರಮನೆ ಆವರಣ, ರೇಸ್‌ಕೋರ್ಸ್ ಅಥವಾ ಬೇರೆ ಎಲ್ಲಿ ಮಾಡಬೇಕು ಎಂಬುದು ಇನ್ನೂ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮ ಸಿದ್ಧತೆ ಸಂಬಂಧ ಮೇ 30ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದರು.
ಬೆಂಗಳೂರು, ಮಂಡ್ಯ ಸೇರಿ ನಾನಾ ಜಿಲ್ಲೆಗಳ ಯೋಗ ತರಗತಿಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕತೆ ತೋರುತ್ತಿದ್ದಾರೆ. ಸ್ಥಳ ಅಂತಿಮವಾದ ಬಳಿಕ ಎಷ್ಟು ಸಂಖ್ಯೆಯಲ್ಲಿ ಯೋಗಪಟುಗಳನ್ನು ಸೇರಿಸಬಹುದು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.