Advertisement

ಹೊಸದಾಗಿ ಡಿಸಿಎಂ ಹುದ್ದೆ ಇದೆಯಾ?

11:53 PM Jan 29, 2020 | Lakshmi GovindaRaj |

ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಮಧ್ಯೆ, ಬೆಳಗಾವಿಯಲ್ಲಿ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ ಯಾರನ್ನೂ ಉಪ ಮುಖ್ಯಮಂತ್ರಿಯನ್ನಾಗಿ ಸೇರಿಸಿಕೊಳ್ಳುವುದಿಲ್ಲ ಎನ್ನುವ ಮೂಲಕ ಡಿಸಿಎಂ ಹುದ್ದೆಯ ಆಕಾಂಕ್ಷಿಗಳಿಗೆ ಶಾಕ್‌ ನೀಡಿದರು.

Advertisement

ಇದಾದ ಸ್ವಲ್ಪ ಹೊತ್ತಿನಲ್ಲಿ ಶಿವಮೊಗ್ಗದಲ್ಲಿ ಮಾತನಾಡಿ, ಡಿಸಿಎಂ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದರು. ಸಿಎಂ ಅವರ ಈ ದ್ವಂದ್ವ ಹೇಳಿಕೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ, ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಸಚಿವಾಕಾಂಕ್ಷಿಗಳಿಂದ ಪ್ರತಿಕ್ರಿಯೆಗಳು, ರಾಜಕೀಯ ಪಕ್ಷಗಳ ನಾಯಕರಿಂದ ಟೀಕೆಗಳು ಕೇಳಿ ಬರುತ್ತಿವೆ. ಸಂಪುಟ ವಿಸ್ತರಣೆ ಕುರಿತಾಗಿನ ಚರ್ಚೆ-ವಿಚರ್ಚೆಗಳ ವಾಗ್ಝರಿ ಇಲ್ಲಿದೆ

“ಹೊಸದಾಗಿ ಡಿಸಿಎಂ ಹುದ್ದೆ ಇಲ್ಲ, ಈಗಿರುವ ಮೂವರನ್ನು ಕೈ ಬಿಡಲ್ಲ’
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ ಯಾರನ್ನೂ ಉಪ ಮುಖ್ಯ ಮಂತ್ರಿಯನ್ನಾಗಿ ಸೇರಿಸಿಕೊಳ್ಳುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಮೇಶ ಜಾರಕಿಹೊಳಿ, ಶ್ರೀರಾಮುಲು ಅವರ ಉಪಮುಖ್ಯಮಂತ್ರಿ ಹುದ್ದೆಯ ಕನಸನ್ನು ಭಗ್ನಗೊಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ಮೂವರೂ ಉಪಮುಖ್ಯಮಂತ್ರಿಗಳು ಮುಂದುವರಿಯಲಿದ್ದಾರೆ.

ಯಾರನ್ನೂ ಬದಲಿಸುವುದಿಲ್ಲ. ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು. ಗುರುವಾರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಲಾಗುವುದು. 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಉಪಚುನಾವಣೆಯಲ್ಲಿ ಗೆದ್ದವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು. ಹೈಕಮಾಂಡ್‌ ಬಯಸಿದರೆ ಒಂದಿಬ್ಬರನ್ನು ಕೈ ಬಿಡಬೇಕಾಗುತ್ತದೆ. ಈ ಕುರಿತು ಹೈಕಮಾಂಡ್‌ ಜತೆ ಸಮಾಲೋಚನೆ ನಡೆಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಡಿಸಿಎಂ ಸ್ಥಾನದ ಬಗ್ಗೆ ಮಾತನಾಡಲ್ಲ
ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ಮೋದಿ, ಅಮಿತ್‌ ಶಾ ಭೇಟಿ ನಂತರ ರಾಜ್ಯ ಸಂಪುಟ ವಿಸ್ತ¤ರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಂಪುಟ ವಿಸ್ತರಣೆ ಯಾವಾಗ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಅವರನ್ನು ಮೊದಲ ಬಾರಿಗೆ ಭೇಟಿಯಾಗುತ್ತಿದ್ದು, ಅವರೊಂದಿಗೆ ಚರ್ಚೆ ನಡೆಸಲಾಗುವುದು.

Advertisement

ಗುರುವಾರ ಬೆಳಗ್ಗೆ 11 ಗಂಟೆಗೆ ವಿಮಾನದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ, ಶುಕ್ರವಾರ ವಾಪಸ್‌ ಬರಲಿದ್ದೇನೆ ಎಂದರು. ರಮೇಶ್‌ ಜಾರಕಿಹೊಳಿ, ಶ್ರೀರಾಮಲು ಅವರನ್ನು ಹೇಗೆ ಸುಧಾರಿಸಿಕೊಂಡು ಹೋಗುತ್ತೀರಾ? ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವ ನಿರ್ಧಾರ ತೆಗೆದುಕೊಂಡಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ, “ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

ವಿಸ್ತರಣೆ ಮಾಡದಿರುವುದೇ ಒಳ್ಳೆಯದು
ಧಾರವಾಡ: ಬಿಜೆಪಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಕುರಿತು ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆ ಕೈ ಬಿಡುವುದೇ ಸೂಕ್ತ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದ್ದಾರೆ. ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ ಎನ್ನುವುದು ಯಾರಿಗೂ ಗೊತ್ತಾಗುತ್ತಿಲ್ಲ

. ಕಾರಣ ಒಂದು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಆಡಳಿತ ಮಾಡಬೇಕಾದರೆ 34 ಜನ ಸಚಿವರು ಇರಬೇಕು. ಆದರೆ, ಈ ಸರ್ಕಾರದಲ್ಲಿ ಬರೀ 11 ಜನ ಸಚಿವರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಎಲ್ಲ ಇಲಾಖೆಗಳ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದು ಅಸಾಧ್ಯ. ಹೀಗಾಗಿ, ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಬಿಜೆಪಿಯಲ್ಲಿ ಸದ್ಯಕ್ಕೆ ಸಂಪುಟ ವಿಸ್ತರಣೆ ಬೆನ್ನಲ್ಲೇ ಬೇಗುದಿ ಶುರುವಾಗುತ್ತದೆ. ಅಲ್ಲಿನ ಅಂತ:ಕಲಹದ ಪರದೆ ತೆರೆದಂತಾಗುತ್ತದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದ ಮೂವರಿಗೆ ಸೇರಿದಂತೆ ಉಮೇಶ ಕತ್ತಿ ಅವರನ್ನೂ ಸಚಿವ ಸಂಪುಟಕ್ಕೆ ಸೇರಿಸಲಾಗುವುದು. ಈಗಿರುವ ಡಿಸಿಎಂ ಹುದ್ದೆಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಬಿಜೆಪಿಯಲ್ಲಿ ಗೊಂದಲ ಇದೆ ಎನ್ನುವುದಕ್ಕೆ ಸಂಪುಟ ವಿಸ್ತರಣೆ ವಿಳಂಬವೇ ಸಾಕ್ಷಿ. ಅವರು ಒಂದು ಬಾರಿ ಸಂಪುಟ ವಿಸ್ತರಣೆ ಮಾಡಲಿ ಆಗ ಎಲ್ಲವೂ ಗೊತ್ತಾಗುತ್ತದೆ. ಕೆಲವರು ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. 17 ಜನರಿಗೂ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಇದೆ. ವಿಸ್ತರಣೆ ನಂತರ ಯಾರು ಏನಾಗುತ್ತಾರೋ ನೋಡಬೇಕು. ನಾವು ಅದಕ್ಕೆ ಕಾಯುತ್ತಿದ್ದೇವೆ.
-ಡಾ.ಜಿ.ಪರಮೇಶ್ವರ್‌, ಮಾಜಿ ಡಿಸಿಎಂ

Advertisement

Udayavani is now on Telegram. Click here to join our channel and stay updated with the latest news.

Next