ಬೆಂಗಳೂರು: ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:NCT ಮಸೂದೆಗೆ ರಾಷ್ಟ್ರಪತಿ ಅಂಕಿತ, ದೆಹಲಿ ಸಿಎಂಗಿಂತ ಗವರ್ನರ್ ಗೆ ಹೆಚ್ಚಿನ ಅಧಿಕಾರ
ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ. ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿ, ಬಸವರಾಜ ಬೊಮ್ಮಾಯಿ ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು ಎಂದು ಪ್ರಶ್ನಿಸಿದ್ದಾರೆ.
ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.