ಬೆಂಗಳೂರು: ಸರ್ಕಾರಿ ವೆಚ್ಚದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನಾ ಸಮಾವೇಶ ಹಮ್ಮಿಕೊಳ್ಳುತ್ತಿರುವ ಬಗ್ಗೆ ಸರ್ಕಾರದ ಅಧಿಕೃತ ಘೋಷಣೆ ಕುರಿತ ದಾಖಲೆಗಳನ್ನು ನೀಡುವಂತೆ ಹೈಕೋರ್ಟ್ ಅರ್ಜಿದಾರರಿಗೆ ಆದೇಶಿಸಿದೆ.
ಸರ್ಕಾರಿ ವೆಚ್ಚದಲ್ಲಿ ಸಾಧನಾ ಸಮಾವೇಶ ನಡೆಸುತ್ತಿರುವ ಮುಖ್ಯಮಂತ್ರಿಗಳು ಆ ವೇದಿಕೆಯನ್ನು ಪ್ರತಿಪಕ್ಷಗಳ ವಿರುದ್ಧ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾನೂನು ವಿದ್ಯಾರ್ಥಿ ಕೀರ್ತಿವರ್ದನ್ ಜೋಶಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನಾ. ಎಚ್.ಜಿ.ರಮೇಶ್ ಮತ್ತು ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ವಾದಿಸಿದ ವಕೀಲರು, ತಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಉದ್ದೇಶದಿಂದ ಸಾಧನಾ ಸಮಾವೇಶ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಸಾಧನೆಗಿಂತ ಪ್ರತಿಪಕ್ಷಗಳನ್ನು ಟೀಕಿಸಲು ಮತ್ತು ಪ್ರತಿಪಕ್ಷ ಮುಖಂಡರ ವಿರುದ್ಧ ಆರೋಪಗಳನ್ನು ಮಾಡಲು ಸಮಾವೇಶದ ವೇದಿಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ರಾಜಕೀಯ ಹಿತಕ್ಕಾಗಿ ಸಾರ್ವಜನಿಕ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಮವೇಶಕ್ಕೆ ಆಗಿರುವ ವೆಚ್ಚವನ್ನು ಮುಖ್ಯಮಂತ್ರಿಗಳಿಂದ ವಸೂಲಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕು ಎಂದು ಕೋರಿದರು.
ಈ ವಾದ ಒಪ್ಪಲು ನಿರಾಕರಿಸಿದ ನ್ಯಾಯಪೀಠ, ಸಾಧನಾ ಸಮಾವೇಶ ನಡೆಸುವ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆಯೇ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಪ್ರಕಟಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಮಾವೇಶ ನಡೆಸುತ್ತಿರುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದರೆ ಆ ದಾಖಲೆ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಡಿ. 8ಕ್ಕೆ ಮುಂದೂಡಿತು.