ಬೆಂಗಳೂರು: ತೆರಿಗೆ ವಂಚನೆ ಆರೋಪ ಹಾಗೂ ದೆಹಲಿಯ ತಮ್ಮ ನಿವಾಸದಲ್ಲಿ ಪತ್ತೆಯಾದ ಕೋಟ್ಯಂತರ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.
2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ಸಚಿವರಿಗೆ ಸೇರಿದ ದೆಹಲಿಯ ನಿವಾಸದ ಮೇಲೂ ದಾಳಿ ನಡೆಸಿ 8.60 ಕೋಟಿ ರೂ. ವಶಕ್ಕೆ ಪಡೆದುಕೊಂಡಿದ್ದರು.
ಈ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಐಟಿ ಅಧಿಕಾರಿಗಳು, ಸಚಿವ ಡಿ.ಕೆ.ಶಿವಕುಮಾರ್, ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಎನ್.ರಾಜೇಂದ್ರ ಮತ್ತು ಆಂಜನೇಯ ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಸಚಿವ ಡಿ.ಕೆ.ಶಿವಕುಮಾರ್ ಅವರ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಐಟಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಇದೊಂದು ಸೂಕ್ಷ್ಮ ಪ್ರಕರಣ. ಯಾವುದೇ ಕಾರಣಕ್ಕೂ ಅರ್ಜಿಯನ್ನು ಮಾನ್ಯ ಮಾಡಬಾರದು.
ಅಲ್ಲದೆ, ಭಾರತೀಯ ದಂಡ ಸಂಹಿತೆ 120-ಬಿ ಅಡಿಯಲ್ಲೇ ಐಟಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಮನವಿ ಮಾಡಿದರು. ವಾದ ಪುರಸ್ಕರಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.
ಮೆಟ್ರೋದಲ್ಲಿ ಕೋರ್ಟ್‌ಗೆ ತೆರಳಿದ ಡಿಕೆಶಿ: ಮಂಗಳವಾರ ಬೆಳಗ್ಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದವರು ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಹೀಗಾಗಿ ಕೋರ್ಟ್‌ಗೆ ತುರ್ತು ಹಾಜರಾಗಬೇಕಿದ್ದ ಹಿನ್ನೆಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಅಧಿಕಾರಿಗಳು, ಆಪ್ತರೊಂದಿಗೆ ಮೆಟ್ರೋ ಮೂಲಕ ತೆರಳಿ ಕೋರ್ಟ್‌ಗೆ ಹಾಜರಾದರು.