ಬೆಂಗಳೂರು: ಇಂದನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಆಪ್ತರ ಮೇಲಿನ ಐಟಿ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ಅವರ ಲೆಕ್ಕಪರಿಶೋಧಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಸತತ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಐವರು ಐಟಿ ಅಧಿಕಾರಿಗಳು ದಾಳಿ ನಡೆಸಿ ಶನಿವಾರ ಮಧ್ಯಾಹ್ನದವರೆಗೆ ಪರಿಶೀಲಿಸಿದ್ದು, ಈ ವೇಳೆ ಶಿವಕುಮಾರ್ ಮತ್ತು ಸೋಮೇಶ್ ಅವರಿಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ಮತ್ತು ಆಸ್ತಿಗಳ ಪತ್ರಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಆದರೆ ಈ ಆಸ್ತಿ ಪತ್ರಗಳಿಗೆ ಸೂಕ್ತ ದಾಖಲೆಗಳಿಲ್ಲ. ಹೀಗಾಗಿ ಇವುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದಾಶಿವನಗರದಲ್ಲಿರುವ ಶಿವಕುಮಾರ್ ಆಪ್ತ ಸೋಮೇಶ್ ಕಚೇರಿ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ಶಿವಕುಮಾರ್ ಅವರಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತ ಕುರಿತ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. ಹಾಗೆಯೇ ಮನೆ ಮೇಲೂ ದಾಳಿ ನಡೆಸಿದ್ದಾರೆ ಎಂದು ಐಟಿ ಮೂಲಗಳು ತಿಳಿಸಿವೆ. ಆದರೆ, ಇದನ್ನು ಸೋಮೇಶ್ ನಿರಾಕರಿಸಿದ್ದು, ಕೇವಲ ಕಚೇರಿಯಲ್ಲಿ ಮಾತ್ರ ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೆಲ ತಿಂಗಳ ಹಿಂದೆ ಶಿವಕುಮಾರ್ ಅವರ ಮನೆ ಮತ್ತು ಸಂಬಂಧಿಕರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂಬಂಧ ಶಿವಕುಮಾರ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ತಮ್ಮ ಇಡೀ ವ್ಯವಹಾರ ವಹಿವಾಟಿನ ಬಗ್ಗೆ ಲೆಕ್ಕಪರಿಶೋಧಕರ ಮೂಲಕ ಐಟಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮೇಶ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.