ಬೆಂಗಳೂರು: ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಗುರುವಾರ ಐಟಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಆದಾಯ ತೆರಿಗೆ ಇಲಾಖೆ ಕಚೇರಿವರೆಗೂ ಮೆರವಣಿಗೆ ನಡೆಸಿ, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ.
ಬಿಜೆಪಿಗೆ ಕರ್ನಾಟಕದಲ್ಲಿ ನೇರವಾಗಿ ಚುನಾವಣೆ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ರೀತಿಯ ಕುತಂತ್ರ ರಾಜಕಾರಣ ಮಾಡಿ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸಿದೆ ಎಂದು ವಾಗ್ಧಾಳಿ ನಡೆಸಿದರು.
ಆದಾಯ ತೆರಿಗೆ ಇಲಾಖೆ ಅತ್ಯಂತ ಗೌರವಯುತವಾದ ಸಂಸ್ಥೆ. ಇಂತಹ ಸಂಸ್ಥೆಯನ್ನು ಈಗ ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರ ಮನೆಗಳ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಆದಾಯ ತೆರಿಗೆ ಇಲಾಖೆಯ ಕೆಲವು ಅಧಿಕಾರಿಗಳು ರಾಜ್ಯಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಶಾಸಕರು ಮತ್ತು ಸಚಿವರನ್ನು ಗುರಿಯಾಗಿಟ್ಟುಕೊಂಡು ಉದ್ದೇಶಪೂರ್ವಕವಾಗಿ ದಾಳಿ ನಡೆಸುವುದು ಸರಿಯಲ್ಲ ಎಂದರು.
ಐಟಿ ಇಲಾಖೆಯ ಬೋರ್ಡ್‌ಗೆ ಮಸಿ: ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ್ದ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪೊಲೀಸರ ಕಣ್ಣು ತಪ್ಪಿಸಿ ಐಟಿ ಇಲಾಖೆಯ ಬೋರ್ಡ್‌ಗೆ ಮಸಿ ಬಳಿದರು. ತಕ್ಷಣ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.
ಐಟಿ ದಾಳಿ ರಾಜಕೀಯ ಪ್ರೇರಿತ: ಈ ಮಧ್ಯೆ, ಗದಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ನಮ್ಮ ಪಕ್ಷದವರ ಮೇಲೆ ಐಟಿ ದಾಳಿ ಮಾಡಿಸುತ್ತಿದೆ ಎಂದು ಆರೋಪಿಸಿದರು.