Advertisement

ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ: ಯಡಿಯೂರಪ್ಪ

11:57 AM Mar 07, 2023 | Team Udayavani |

ಕಲಬುರಗಿ: ರಾಜ್ಯಾದ್ಯಂತ ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಹಾಲಿ ನಾಲ್ಕೈದು ಶಾಸಕರ ಟಿಕೆಟ್ ಸಿಗದಿರುವ ಸಾಧ್ಯತೆಯಿದೆ ಎಂದು ಇಂಗಿತ ವ್ಯಕ್ತಪಡಿಸಿದರು.

Advertisement

ಇಲ್ಲಿನ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಕಾಂಗ್ರೆಸ್ ಪಕ್ಷದ ಪ್ರಜಾದನಿ ಯಾತ್ರೆಯಲ್ಲಿ ಜನರು ಸೇರುತ್ತಿಲ್ಲ. ಮತ್ತೊಂದೆಡೆ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎಂಬುದನ್ನು ಸಾಬೀತುಪಡಿಸುವಂತಿದೆ ಎಂದರು.

ಇತ್ತೀಚೆಗೆ ನಡೆದ ತ್ರಿಪುರಾ, ಮೇಘಾಲಯ ಚುನಾವಣೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದು ಸಾಬೀತಾಗಿದೆ. ಇದರ ಜೊತೆಗೆ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿರುವುದು ಮತ್ತೊಮ್ಮೆ ದೃಢಪಟ್ಟಿದೆ ಎಂದರು.

ಬೊಮ್ಮಾಯಿ ನೇತೃತ್ವ: ರಾಜ್ಯದಲ್ಲಿ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಮುಗಿದ ಬಳಿಕ ನಡೆಯುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ನಿರ್ಧಾರ ಆಗಲಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಚಿವರಾದ ವಿ.ಸೋಮಣ್ಣ ಹಾಗೂ ನಾರಾಯಣಗೌಡ ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅವರಷ್ಟೇ ಅಲ್ಲ ಯಾರೊಬ್ಬರೂ ಪಕ್ಷ ಬಿಡುವುದಿಲ್ಲ. ಬೇರೆ ಬೇರೆ ಪಕ್ಷಗಳಿಂದ ಬಿಜೆಪಿಗೆ ಯಾರಾದರೂ ಬರುವುದಾದರೆ ಮುಕ್ತ ಸ್ವಾಗತವಿದೆ ಎಂದು ಆಹ್ವಾನ ನೀಡಿದರು.

Advertisement

ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುದ್ದಿಗಾರರು ಗಮನ ಸೆಳೆದಾಗ, ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಲೇವಡಿ ಮಾಡಿದರು.

ಇದನ್ನೂ ಓದಿ:ಕೋವಿಡ್ ನಂತೆಯೇ ಹರಡುತ್ತದೆ ‘ಎಚ್3ಎನ್2 ವೈರಸ್’; ಮಾಸ್ಕ್- ಅಂತರ ಮತ್ತೆ ಜಾರಿ ಸಾಧ್ಯತೆ!

ಇನ್ನು, ಬಿಜೆಪಿ ಉಮೇದುವಾರರ ಮೊದಲ ಪಟ್ಟಿ ಆದಷ್ಟು ಬೇಗ ಪ್ರಕಟಗೊಳ್ಳಲಿದೆ. ತಮ್ಮ ಪುತ್ರ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಬಹುಶಃ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಸೂಚ್ಯವಾಗಿ ಸುಳಿವು ನೀಡಿದರು

ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ್,  ಆಳಂದ ಶಾಸಕ ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್,  ಬಿ.ಜಿ.ಪಾಟೀಲ್, ಶಶಿಲ್ ಜಿ.ನಮೋಶಿ, ಸುನಿಲ್ ವಲ್ಯಾಪುರೆ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next