Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಒಂದಷ್ಟು ಅಸಮಾಧಾನ ಇರುವುದು ಸತ್ಯ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕೆಲಸವನ್ನು ರಾಜ್ಯಾಧ್ಯಕ್ಷನಾಗಿ ನಾನು ಮಾಡುತ್ತೇನೆ. ಹಿರಿಯ ನಾಯಕರನ್ನು ಭೇಟಿ ಮಾಡುವುದು ನನ್ನ ಜವಾಬ್ದಾರಿ. ಶೀಘ್ರದಲ್ಲೇ ಹೋಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
Related Articles
Advertisement
ನಾನೀಗ ಶಿಕಾರಿಪುರ ಕ್ಷೇತ್ರದ ಶಾಸಕನಾಗಿದ್ದೇನೆ. ಆದರೆ ನನ್ನನ್ನು ರಾಜಕೀಯವಾಗಿ ಗುರುತಿಸಿದ್ದು ವರುಣ ಕ್ಷೇತ್ರ. ನನಗೆ ರಾಜಕೀಯ ಅಡಿಪಾಯ ಹಾಕಿಕೊಟ್ಟಿದ್ದು ವರುಣ ಕ್ಷೇತ್ರ. ಮೈಸೂರು ಚಾಮರಾಜನಗರ ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲಿದೆ. ಮುಂಬರುವ ದಿನಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಬಿ ವೈ ವಿಜಯೇಂದ್ರ ಹೇಳಿದರು.
ರೈತ ವಿರೋಧಿ ಸರ್ಕಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ಸಚಿವ ಶಾಸಕರ ನಡುವೆ ಸಮನ್ವಯತೆ ಇಲ್ಲ. ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ. ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸುವುದನ್ನೇ ಡಿ ಕೆ ಶಿವಕುಮಾರ್ ಗುರಿಯಾಗಿಸಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ದಿನ ಬೆಳಗಾದರೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡುತ್ತಿದ್ದ 4 ಸಾವಿರ ಅನುದಾನವನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದನಂತರ ಕಡಿತ ಮಾಡಲಾಗಿದೆ. ಇದು ರೈತ ವಿರೋಧಿ ಸರ್ಕಾರ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರ ಸ್ವಂತ ಜಿಲ್ಲೆಯಲ್ಲೇ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ನಡೆದಿದೆ ಎಂದು ಆರೋಪಿಸಿದರು.
ಜಮೀರ್- ಪ್ರಿಯಾಂಕ್ ರಾಜೀನಾಮೆ ನೀಡಲಿ: ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹಮದ್ ಖಾನ್ ಸ್ಪೀಕರ್ ಸ್ಥಾನಕ್ಕೆ ಅವಮಾನ ಆಗುವ ರೀತಿ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ಬೇಜವಾಬ್ದಾರಿಯುತ ಹೇಳಿಕೆಯನ್ನು ಸಚಿವ ಜಮೀರ್ ನೀಡಿದ್ದಾರೆ. ಇದೇ ರೀತಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರದ ಅಮಲಿನಲ್ಲಿ ತೇಲಾಡುತ್ತಾ ಏನು ಮಾಡಿದರೂ ನಡೆಯುತ್ತದೆ ಎಂದು ಸಚಿವರು ಅಂದುಕೊಂಡಿದ್ದಾರೆ. ಹಾಗಾಗಿ ಜಮೀರ್ ಅಹಮದ್ ಖಾನ್ ಹಾಗು ಪ್ರಿಯಾಂಕ್ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡದಿದ್ದರೇ ಮುಖ್ಯಮಂತ್ರಿಗಳೇ ಅವರಿಬ್ಬರ ರಾಜೀನಾಮೆ ಪಡೆಯುವ ಕೆಲಸ ಮಾಡಬೇಕು ಎಂದು ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಬಿಜೆಪಿ ಪರಿಸ್ಥಿತಿಯನ್ನು ಕಾದು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಲೋಕಸಭೆ ಚುನಾವಣೆವರೆಗೂ ಕಾದು ನೋಡಿ, ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೆ ಎಂಬುದು ಗೊತ್ತಾಗುತ್ತದೆ. ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ನಲ್ಲಿನ ಅಸಮಾಧಾನದ ಬಗ್ಗೆ ಎಲ್ಲರಿಗೂ ಗೊತ್ತಾಗುತ್ತದೆ. ಆ ಕಾಲ ಬಹಳ ಹತ್ತಿರ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕರಾದ ಸಿ ಹೆಚ್ ವಿಜಯಶಂಕರ್, ಎನ್ ಮಹೇಶ್, ಎಂ ಶಿವಣ್ಣ, ಎಲ್ ನಾಗೇಂದ್ರ, ನಿರಂಜನಕುಮಾರ್, ಹರ್ಷವರ್ಧನ್, ಬಾಲರಾಜ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.