ಬೆಂಗಳೂರು: “ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಪೂರ್ವ ನಿಯೋಜಿತವಾಗಿದ್ದು, ಒಂದೇ ದಿನದಲ್ಲಿ ನಿರ್ಧಾರವಾಗುವಂತದ್ದಲ್ಲ ಎಂದು ಕಾಂಗ್ರೆಸ್, ಜೆಡಿಎಸ್‌ನವರು ಅರಿತುಕೊಳ್ಳಬೇಕು. ಕಾಂಗ್ರೆಸ್, ಜೆಡಿಎಸ್‌ನವವರ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಐಟಿ ದಾಳಿ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ನಾಯಕರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಐಟಿ ದಾಳಿಗೂ ಮುನ್ನ ಹಲವು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ
ಎಂದು ಗೃಹ ಇಲಾಖೆ/ಎಸಿಬಿ ಹೊಂದಿರುವ ನಾಯಕರಿಗೆ ತಿಳಿದಿಲ್ಲವೇ? ಅಥವಾ ತಿಳಿದೂ ನಾಟಕವಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಆಪ್ತರ ಮೇಲೂ ಐಟಿ ದಾಳಿ ನಡೆದಿತ್ತು: ರಾಜ್ಯದಲ್ಲಿ ನಡೆದ ಐಟಿ ದಾಳಿ ಬಗ್ಗೆ ಪ್ರತಿಪಕ್ಷಗಳು ಅಪಪ್ರಚಾರದಲ್ಲಿ ತೊಡಗಿವೆ. ಅಕ್ರಮ ಆದಾಯಕ್ಕೆ ಸಂಬಂಧ ಪಟ್ಟಂತೆ ಐಟಿ ಇಲಾಖೆಯು ನಿರಂತರವಾಗಿ ದಾಳಿ ನಡೆಸುತ್ತಿರುತ್ತದೆ. ಈ ಹಿಂದೆ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಬಲಿಗರ ಮೇಲೂ ಐಟಿ ದಾಳಿ ನಡೆದಿತ್ತು. ಆಗ ಕಾಂಗ್ರೆಸ್, ಜೆಡಿಎಸ್‌ನವರು ಪ್ರತಿಭಟನೆ ನಡೆಸಿರಲಿಲ್ಲ. ಕಾಂಗ್ರೆಸ್, ಜೆಡಿಎಸ್ ಪೂರ್ವಾಗ್ರಹಪೀಡಿತವಾಗಿ ಸುಳ್ಳು ಆರೋಪ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಮುರಳೀಧರರಾವ್ ದೂರಿದರು