ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ‘100 ನಾಟ್ ಔಟ್’ ಆಂದೋಲನ ಆರಂಭಿಸಿದ್ದು, ‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಐದು ದಿನಗಳ ಕಾಲ ನಡೆಯಲಿರುವ ಈ ಪ್ರತಿಭಟನಾ ಆಂದೋಲನಕ್ಕೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಪ್ರತಿಭಟನೆ ಮಾಡಿ ಚಾಲನೆ ನೀಡಿದರು. ‘ಬಹಳ ವಿಶೇಷ ಹಾಗೂ ಐತಿಹಾಸಿಕ ದಿನಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಭಾರತ ಸರ್ಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಬರೆ ಎಳೆದಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ, ಕೇವಲ ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡು ವಾಹನ ಚಲಾಯಿಸುವವರಿಗೆ ಮಾತ್ರ ಪರಿಣಾಮ ಬೀರುತ್ತಿಲ್ಲ. ಪ್ರತಿ ನಾಗರೀಕನೂ ಖರೀದಿಸುವ ಪ್ರತಿ ವಸ್ತುಗಳು ದುಬಾರಿಯಾಗುವಂತೆ ಬರೆ ಎಳೆದಿದ್ದಾರೆ ಎಂದು ಡಿಕೆಶಿ ಹೇಳಿದರು.
ಇದನ್ನೂ ಓದಿ:ಪಾಸ್ ಪೋರ್ಟ್ ಇಲ್ಲದೆ ಅಕ್ರಮವಾಗಿ ಮಂಗಳೂರಿಗೆ ಬಂದಿದ್ದ 38 ಮಂದಿ ಪೊಲೀಸರ ವಶಕ್ಕೆ
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ಮಾಡಿದ್ದನ್ನು ನಾವು ನೋಡಿದ್ದೇವೆ. ಇದೇ ಯಡಿಯೂರಪ್ಪ, ಶೋಭ ಕರಂದ್ಲಾಜೆ ಹಾಗೂ ಸಚಿವರೆಲ್ಲರೂ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ ಮಾಡಿದ್ದರು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42 ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ. ಏಪ್ರಿಲ್ ನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ. ಸರ್ಕಾರ ತನ್ನ ಆದಾಯ ವೃದ್ಧಿ ಮಾಡಿಕೊಳ್ಳಲು, ಬೊಕ್ಕಸ ತುಂಬಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಳ ಮಾಡುತ್ತಿದೆ. ಇದು ಜನರ ನಿತ್ಯ ಬದುಕಿನಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ. ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರ್ಕಾರ. ಇದರ ಬಗ್ಗೆ ನಾವು ಜನರಲ್ಲಿ ತಿಳುವಳಿಕೆ ಮೂಡಿಸಿ, ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದರು.
ನೆರೆ ರಾಷ್ಟ್ರಗಳಲ್ಲಿ ಇಂಧನ ಬೆಲೆ ನಮಗಿಂತ ಅರ್ಧದಷ್ಟಿದೆ. ನೀವು ಮಾತ್ರ ಜನರಿಂದ ಸುಲಿಗೆ ಮಾಡುತ್ತಲೇ ಇದ್ದೀರಿ. ಇದನ್ನು ನಿಲ್ಲಿಸಿ ಇಂಧನ ಬೆಲೆ ಇಳಿಸಬೇಕು ಎಂದು ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರು ಈ ಹಿಂದೆ ಏನೇನು ಮಾತನಾಡಿದ್ದರು ಎಂಬುದೆಲ್ಲವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ. ಈ ಹಿಂದೆ ಅವರು ಪ್ರತಿಭಟನೆ ಮಾಡಿದ್ದ ಫೋಟೋವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ಕಳುಹಿಸಿ ಕೊಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.