ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳು ಬಳಸುವ ವಿದ್ಯುತ್ ಶುಲ್ಕ ಕಡಿಮೆ ಮಾಡಲು ಸರಕಾರ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕೈಗಾರಿಕೆಗಳು ಬಳಸುವ ವಿದ್ಯುತ್ ಮೇಲೆ ಅಧಿಕ ಶುಲ್ಕ ವಿಧಿಸಲಾಗುತ್ತಿರುವುದನ್ನು ಸಿಎಂ ಗಮನಕ್ಕೆ ತರಲಾಗಿದೆ. ಇದನ್ನು ಕಡಿಮೆ ಮಾಡಲು ಅವರು ಒಲವು ತೋರಿದ್ದು, ಈ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಅವರು ನಗರದಲ್ಲಿ ಶುಕ್ರವಾರ ಲಘು ಉದ್ಯೋಗ ಭಾರತಿಯ ಬೆಂಗಳೂರು ಉತ್ತರ ಪೀಣ್ಯ ಘಟಕ ಉದ್ಘಾಟಿಸಿ ಹೇಳಿದರು.
ಸಣ್ಣ ಕೈಗಾರಿಕೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರದ ಬಗ್ಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ಪ್ರತ್ಯೇಕ ಆಸ್ತಿ ತೆರಿಗೆ ಸ್ಲಾಬ್?
ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಗಳ ಮಧ್ಯದಲ್ಲಿ ಕೈಗಾರಿಕೆ ಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ಸ್ಲಾéಬ್ ಅನ್ನು ಘೋಷಿಸುವಂತೆ ಸಿಎಂಗೆ ಮನವಿ ಮಾಡಲಾಗಿದೆ. ಈ ಬಗ್ಗೆಯೂ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊರೊನಾ ಸಂಕಷ್ಟದಲ್ಲೂ ಹೂಡಿಕೆದಾರರನ್ನು ಆಕರ್ಷಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದ್ದು, ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ)ಯಲ್ಲಿ 3ನೇ ಸ್ಥಾನ ಪಡೆದಿದೆ ಎಂದ ಶೆಟ್ಟರ್, ಸಿಎಂ ನೇತೃತ್ವದಲ್ಲಿ ಸರಕಾರ ರೂಪಿಸಿದ ಕ್ರಾಂತಿಕಾರಿ ಕಾಯ್ದೆ ಮತ್ತು ನೀತಿಗಳು ಈಗ ಫಲ ನೀಡುತ್ತಿವೆ. ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಟಾಪ್ 5ರಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ ಎಂದರು.