ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶನಿವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಯಡಿಯೂರಪ್ಪ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದರಿಂದ ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ನ್ಯಾಯಾಂಗ ಪ್ರಜಾಪ್ರಭುತ್ವದ ಆಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅದೇ ಕಾರಣಕ್ಕೆ ಇಬ್ಬರೂ ನಾಯಕರು ಈ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಇಪ್ಪತ್ತು ತಿಂಗಳು ಅವಧಿ ಇರುವಾಗಲೇ ಬೊಮ್ಮಾಯಿ ಅವರ ನೇತೃತ್ವ ಎಂದು ಹೇಳುವ ಅಗತ್ಯವೇನಿತ್ತು ಎಂಬ ಬೇಸರವನ್ನು ಇಬ್ಬರೂ ನಾಯಕರು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.