Advertisement

ರೈತರಿಂದ ಜೈಲ್‌ಭರೋ

12:30 PM Aug 09, 2017 | Team Udayavani |

ಮಂಡ್ಯ: ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಂಗಳವಾರವೂ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದವು. ಕೆಆರ್‌ಎಸ್‌ನಿಂದ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಜೈಲ್‌ಭರೋಗೆ ಕರೆ ನೀಡಲಾಗಿತ್ತು. ಇದರಿಂದ ವಿಶ್ವೇಶ್ವರಯ್ಯ
ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತಸಂಘದ ಕಾರ್ಯಕರ್ತರು ಹೆದ್ದಾರಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

ಈ ಸಮಯದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ, ತಮಿಳುನಾಡಿಗೆ ನಿಯಮಿತವಾಗಿ ನೀರು ಹರಿಸುತ್ತಾ ಕಾವೇರಿ ಕಣಿವೆಯ ಜಲಾಶಯಗಳ ವ್ಯಾಪ್ತಿಯ ರೈತರಿಗೆ ನೀರುಣಿಸಲು ನಾಲೆಗಳಿಗೆ ನೀರು ಬಿಡುಗಡೆ ಮಾಡದಿರುವುದು ಅತ್ಯಂತ ಖಂಡನೀಯ ಎಂದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.14ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸುವ ತೀರ್ಮಾನವನ್ನು ಪ್ರಕಟಿಸಬೇಕು. ಇಲ್ಲವಾದರೆ ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  ಕೆಆರ್‌ ಪೇಟೆಯಲ್ಲಿ ರೈತ ಸಂಘದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಚಳವಳಿ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೋಲಿಸರು ಅವರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು. ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇದಕ್ಕೂ ಮೊದಲು ಪ್ರತಿಭಟನಾಕಾರರಿಂದ ಬೈಕ್‌ ರ್ಯಾಲಿ ನಡೆಯಿತು. ಇದೇ ವೇಳೆ, ಪಟ್ಟಣದ ಮದ್ದೂರಮ್ಮ ಕೆರೆಯಂಗಳದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ 33ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ರೈತರ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿರಿಸಿದ್ದು, ತಾಲೂಕಿನ ಪಾಲಹಳ್ಳಿ ಗ್ರಾಮಸ್ಥರು ಹೆದ್ದಾರಿ ತಡೆದು ಅರೆ ಬೆತ್ತಲೆ ಪ್ರತಿಭಟನೆ ಮಾಡುವ
ಮೂಲಕ ರೈತರ ನಿರಂತರ ಧರಣಿಯನ್ನು ಬೆಂಬಲಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next