Advertisement

ಜಲ ಜೀವನ್ ಮಿಷನ್ ಯೋಜನೆಯಡಿ 15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

05:22 PM May 20, 2020 | sudhir |

ಬೆಂಗಳೂರು : ಭಾರತ ಸರ್ಕಾರದ ಜಲ ಜೀವನ್  ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

Advertisement

ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ. 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ 1150 ಕೋಟಿ ರೂ. ಅನುದಾನ ಮಂಜೂರಾಗಿದೆ.

ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನೂ ಸಂಯೋಜಿಸಿ, 2022-23 ರೊಳಗೆ ರಾಜ್ಯದಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸುವಂತೆ ಸಲಹೆ ನೀಡಿದರು.
ಪ್ರಾರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ..ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next