Advertisement
ರವಿವಾರ ಕೊಪ್ಪ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 5 ವರ್ಷ ಆಡಳಿತ ನೀಡಿದ ಸಿದ್ದರಾಮಯ್ಯ ಅವರು ಜನ ನೆನಪಿಟ್ಟುಕೊಳ್ಳುವಂತಹ ಯಾವ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ, ಯೋಜನೆ ತಂದಿದ್ದಾರೆ ಎಂಬುದನ್ನು ಹೇಳಲಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರಕ್ಷಕರು ಎಂದು ಬಿಂಬಿಸಿ ಕೊಳ್ಳುವ ಕಾಂಗ್ರೆಸ್ಸಿಗರು ಹಾಸ್ಟೆಲ್ ವಿದ್ಯಾರ್ಥಿಗಳ ಹಾಸಿಗೆ, ದಿಂಬಿನಲ್ಲೂ ಭ್ರಷ್ಟಾಚಾರ ನಡೆಸಿದರು.
ರಾಜ್ಯ ಬಿಜೆಪಿ ಸರಕಾರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದು, ರೈತರ ಮಕ್ಕಳಿಗೆ ವಿದ್ಯಾಸಿರಿ ಸಹಿತ ಹಲವು ಯೋಜನೆಗಳನ್ನು ರೂಪಿಸಿದೆ. ಕಾಡಾನೆ ಮತ್ತು ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಆನೆ ನಿಗ್ರಹ ಕಾರ್ಯಪಡೆ ರಚಿಸಿದೆ. ಮಲೆನಾಡಿನ ಹತ್ತು ಹಲವು ಸಮಸ್ಯೆಗಳನ್ನು ನಿವಾರಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದ್ದು, ಕಾಫಿ ಬೆಳೆಗಾರರ ಭೂ ಒತ್ತುವರಿ ಸಮಸ್ಯೆ ಹಾಗೂ ಅಡಕೆ ಎಲೆಚುಕ್ಕಿ ರೋಗ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ರಾಜ್ಯದ ಭವ್ಯ ಭವಿಷ್ಯದ ದೃಷ್ಟಿಯಿಂದ 2023ರ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತುಹಾಕಿ ಬದಲಾವಣೆ ಮನ್ವಂತರ ಆರಂಭವಾಗಲಿದೆ ಎಂದರು.
Related Articles
Advertisement
ಸಿದ್ದು, ಡಿಕೆಶಿ ನಾನೇ ಸಿಎಂ ಚರ್ಚೆ ಆರಂಭವಾಗಿದ್ದು ಅದು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಳ್ಳು ಭರವಸೆಗಳನ್ನು ನೀಡಿ ರೈತರು ಮತ್ತು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು, ಅವರನ್ನು ಜನ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿದರು. ತರೀಕೆರೆ ಶಾಸಕ ಡಿ.ಎಸ್. ಸುರೇಶ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರಡಪ್ಪ ಮೊದಲಾದವರು ಉಪಸ್ಥಿತರಿದ್ದರು.