ಮಂಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ದ್ವಿತೀಯ ಅವಧಿಯ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಕರ್ನಾಟಕ ಜನಸಂವಾದ ರ್ಯಾಲಿಯನ್ನು ದ.ಕ. ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ವೀಕ್ಷಿಸಿ ಆಲಿಸಿದರು.
ಸಂಜೆ 6 ಗಂಟೆಗೆ ಆರಂಭಗೊಂಡ ವರ್ಚುವಲ್ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡಿ ಮೋದಿ ಸರಕಾರದ ಸಾಧನೆಗಳನ್ನು ವಿವರಿಸಿದರು. ಸಿಎಂ ಬಿ.ಎಸ್.ಯಡಿಯೂರಪ್ಪ ಮುಖ್ಯ ಅತಿಥಿಯಾಗಿದ್ದರು. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜನಸಂವಾದ ರ್ಯಾಲಿ ವೀಕ್ಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿದರು. ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ, ಜಿ. ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಡ ಅಧ್ಯಕ್ಷ ರವಿಶಂಕರ ಮಿಜಾರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಜೆ.ಪಿ.ನಡ್ಡಾ ಅವರ ಭಾಷಣವನ್ನು ಜಿಲ್ಲೆಯಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಮೋದಿಯವರು ದೇಶದಲ್ಲಿ ಅಭಿವೃದ್ಧಿಯ ಹೊಸ ಶಕೆಯನ್ನು ಆರಂಭಿಸಿದ್ದಾರಲ್ಲದೆ, ಅಪೂರ್ವ ಸಾಧನೆಗಳ ಮೂಲಕ ವಿಶ್ವಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿರುವ ಮಹಾನ್ ನಾಯಕ. ದೇಶದಲ್ಲಿ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ 1,861 ಬೂತ್ ಮಟ್ಟದಲ್ಲಿ ಕರ್ನಾಟಕ ಜನಸಂವಾದ ರ್ಯಾಲಿಯನ್ನು ಎಲ್‌ಇಡಿ ಪರದೆ, ಮೊಬೈಲ್‌ಗಳಲ್ಲಿ , ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ವೀಕ್ಷಿಸಿ, ಆಲಿಸಿದರು.