ಬೆಂಗಳೂರು: ಚಿನ್ನದ ಗಟ್ಟಿ ಪಡೆದ ಆರೋಪ ಹೊತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಭಾನುವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ . ಗಣಿ ಧಣಿಗೆ 14 ದಿನಗಳ ಕಾಲ ನೆವೆಂಬರ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ 1 ನೇ ಎಸಿಎಂಎಂ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಸಿಸಿಬಿ ಪೊಲೀಸರು ಸುದೀರ್ಘ 20 ಗಂಟೆಯ ಅವಧಿಯ ಒಳಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದರು. ರೆಡ್ಡಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ,ಕೋರಮಂಗಲದಲ್ಲಿ ರುವ ಫ್ಲ್ಯಾಟ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಂಗ ಬಂಧನ ಹಿನ್ನಲೆಯಲ್ಲಿ ರೆಡ್ಡಿ ಅವರನ್ನು ವ್ಯಾಪಕ ಪೊಲೀಸ್ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ರೆಡ್ಡಿ ಪರ ವಕೀಲರು ನಾಳೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ.
ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆ್ಯಂಬಿಡೆಂಟ್ ಕಂಪನಿಯ ಮಾಲೀಕ ಸೈಯದ್ ಅಹಮದ್ ಫರೀದ್ ಬಳಿ 57 ಕೆ.ಜಿ. ಚಿನ್ನದ ಗಟ್ಟಿ ಪಡೆದ ಆರೋಪ ಜನಾರ್ದನ ರೆಡ್ಡಿ ಅವರ ಮೇಲಿದೆ. ಈ ಪ್ರಕರಣದಲ್ಲಿ ಸುಳಿವು ನೀಡದೇ ನಾಪತ್ತೆಯಾಗಿದ್ದ ಗಾಲಿ ಜನಾರ್ದನ ರೆಡ್ಡಿ,ಶನಿವಾರ ತಾವಾಗಿಯೇ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿ ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ.